ರಾಜ್ಯದ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್
ಬೆಂಗಳೂರು : ಆಹಾರ ತಯಾರಿಕೆಯ ವೇಳೆ ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 251 ಹೋಟೆಲ್, ಅಂಗಡಿಗಳಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿತ್ತು. ಈ ಪೈಕಿ 52 ಕಡೆ ಪ್ಲಾಸ್ಟಿಕ್ ಹಾಳೆ ಬಳಸಿ ಇಡ್ಲಿ ತಯಾರು ಮಾಡುತ್ತಿದ್ದು, ಅವುಗಳ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದರು.
ಈ ಹಿಂದೆ ಹೋಟೆಲ್ಗಳಲ್ಲಿ ಇಡ್ಲಿ ತಯಾರಿಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಹೆಚ್ಚಿನ ಕಡೆ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ. ಇದರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ವಿವರಿಸಿದರು.
ಪ್ಲಾಸ್ಟಿಕ್ ಬಳಕೆಯು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು. ರಾಜ್ಯದ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.