ಭಾರೀ ಮಳೆ: ನಾಳೆ (ಜು. 24) ಕೊಡಗು ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ
ಸಾಂದರ್ಭಿಕ ಚಿತ್ರ
ಕೊಡಗು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ನಾಳೆ (24-07-2023) ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ. ಮರ, ಬರೆ, ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ರಸ್ತೆ ಮತ್ತು ಕಾಲು ಸೇತುವೆಗಳು ಕೊಚ್ಚಿ ಹೋದ ಘಟನೆಯೂ ನಡೆದಿದೆ. ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ.
ಇನ್ನು ಕರಾವಳಿ, ಮಲೆನಾಡು, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶಾಲೆಗಳಿಗೆ ಮಾತ್ರ ರಜೆ: ಜಿಲ್ಲಾಧಿಕಾರಿ ಸ್ಪಷ್ಟನೆ
ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ (24-07-2023) ರಜೆ ಘೋಷಿಸಲಾಗಿತ್ತು. ಆದರೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಸದರಿ ಪ್ರಕಟನೆಯನ್ನು ಭಾಗಶಃ ತಿದ್ದುಪಡಿ ಮಾಡಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟಪಡಿಸಿದ್ದಾರೆ.