ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ: ಹೆಚ್.ಡಿ.ಕೆ
'ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ?'
Photo: facebook.com/hdkumaraswamy
ಬೆಂಗಳೂರು, ಅ. 25: ‘ಈ ಜನ್ಮವಷ್ಟೇ ಅಲ್ಲ, ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಛಿದ್ರ ಮಾಡಲು ಸಾಧ್ಯವಿಲ್ಲ’ ಎಂದು ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ. ಇನ್ನೂ, ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಅವರು ಟೀಕಿಸಿದರು.
ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ 'ದುಷ್ಟ'ಪ್ರಜ್ಞೆ, 'ಅತಿ' ಬುದ್ಧಿವಂತಿಕೆ, 'ಅಸಾಮಾನ್ಯ' ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ಹೊರಹಾಕಿದರು.
ಈ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು ಎಂದು ದರ್ಪದ ಮಾತು ಶಿವಕುಮಾರ್ ಹೇಳಿದ್ದಾರೆ. ಆದರೆ, ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ ಎಂದರು.
ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ?. ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ಕುಮಾರಸ್ವಾಮಿ ಹೇಳಿದರು.