ಪಕ್ಷಕ್ಕೆ ಮುಜುಗರ ಆಗುವಂತಹ ಹೇಳಿಕೆ ನೀಡುವುದನ್ನು ಕೂಡಲೇ ನಿಲ್ಲಿಸಿ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಜೂ. 30: ‘ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಯಾರು ಆ ರೀತಿ ಮಾತನಾಡಿದ್ದಾರೋ ಅವರ ಜೊತೆ ಚರ್ಚಿಸಿ ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗುವುದು’ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶುಕ್ರವಾರ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಪಕ್ಷಕ್ಕೆ ಮುಜುಗರ ಆಗುವಂತಹ ಹೇಳಿಕೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದರೆ ಸೂಕ್ತ ಕ್ರಮವನ್ನು ಕೈಗೊಳ್ಳುವ ತೀರ್ಮಾನ ಮಾಡಿದ್ದೇವೆ’ ಎಂದು ಹೇಳಿದರು.
ಜು.4ಕ್ಕೆ ಸತ್ಯಾಗ್ರಹ: ‘ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ಪಕ್ಷದ ಕಾರ್ಯಕರ್ತರು ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ’ ಎಂದು ಯಡಿಯೂರಪ್ಪ ತಿಳಿಸಿದರು.
ಕಾಂಗ್ರೆಸ್ ಮನೆ ಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಅನುಷ್ಠಾನಕ್ಕೆ ತರಬೇಕು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದೇವೆ. ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು, ಪದವೀಧರ ನಿರುದ್ಯೋಗಿಗಳಿಗೆ 3ಸಾವಿರ ರೂ. ಕೊಡಬೇಕು, 200 ಯೂನಿಟ್ ವಿದ್ಯುತ್ ನೀಡಲೇಬೇಕು. ಜತೆಗೆ ಮಹಿಳೆಯರಿಗೆ 2 ಸಾವಿರ ರೂ. ಕೊಡಬೇಕು ಎಂದು ಆಗ್ರಹಿಸಿ ಧರಣಿ ನಡೆಸಲಾಗುವುದು’ ಎಂದರು.