ಸಂಚಾರ ನಿಯಮ ಪಾಲಿಸದ ಚಾಲಕರಿಂದ ಅಪಘಾತ ಹೆಚ್ಚಳ: ಹೈಕೋರ್ಟ್ ಕಳವಳ
ಬೆಂಗಳೂರು, ನ.17: ಚಾಲಕರ ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಹಾಗೂ ಅಧಿಕೃತ ಚಾಲನಾ ದಾಖಲೆಗಳಿಲ್ಲದೇ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಅತಿವೇಗದ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಅಪರಾಧಿಯೊಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಎತ್ತಿ ಹಿಡಿದಿದೆ.
ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಆರೋಪದಲ್ಲಿ ಆರು ತಿಂಗಳ ಕಾಲ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹನುಮಂತರಾಯಪ್ಪ ಎಂಬುವರು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. ಅರ್ಜಿಯನ್ನು ವಜಾಗೊಳಿಸಿದೆ.
ಸಾಕ್ಷ್ಯಾಧಾರಗಳು ಹಾಗೂ ವಿಚಾರಣಾ ನ್ಯಾಯಾಲಯದ ಆದೇಶಗಳನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಶಿಕ್ಷೆ ವಿಧಿಸಿರುವುದು ಸರಿಯಾಗಿದೆ. ಈ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.
ಪ್ರಕರಣವೇನು?: 2012ರ ಜುಲೈ 23 ರಂದು ಮಧ್ಯಾಹ್ನ 3.45ರ ಸುಮಾರಿಗೆ ಅರ್ಜಿದಾರ(ಅಪರಾಧ) ಹನುಮಂತರಾಯಪ್ಪ ಕೊರಟಗೆರೆಯ ಉರಿಡಿಗೆರೆ ರಸ್ತೆಯ ಇರಕಸಂದ್ರ ಕಾಲೋನಿ ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಮೋಟಾರ್ ಸೈಕಲ್ ಚಲಾಯಿಸುತ್ತಿದ್ದರು. ಈ ವೇಳೆ ಪಾದಚಾರಿ ಪರಮೇಶಯ್ಯಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.
ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಪೊಲೀಸರು ಹನುಮಂತರಾಯಪ್ಪ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ಆರು ತಿಂಗಳು ಸಾಧಾರಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಆದೇಶಿಸಿತ್ತು.
ಇದನ್ನು ಪ್ರಶ್ನಿಸಿ ಹನುಮಂತರಾಯಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಘಟನೆ ಸಂಬಂಧ ಅರ್ಜಿದಾರರಿಗೆ ಯಾವುದೇ ಉದ್ದೇಶವಿರಲಿಲ್ಲ. ಅಲ್ಲದೆ, ಅರ್ಜಿದಾರರ ದುಡಿಮೆಯೇ ಮನೆಗೆ ಆಧಾರವಾಗಿದೆ. ಆದ ಕಾರಣ ಅರ್ಜಿದಾರರ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು.