ಅಪರಾಧ ಪ್ರಕರಣ ಹೆಚ್ಚಳ, ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಒಂಬತ್ತು ತಿಂಗಳಲ್ಲಿ ಶೇ.30ರಷ್ಟು ಅಪರಾಧ ಪ್ರಕರಣಗಳು ಹೆಚ್ಚಳವಾಗಿವೆ.ಆದರೂ, ಸರಕಾರ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಯಾವುದೇ ಬರಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಸಿಎಂ ಆರ್ಥಿಕ ಪರಿಸ್ಥಿತಿ ಸರಿಯಾಗಿದೆ ಎನ್ನುತ್ತಾರೆ. ಹಾಗಿದ್ದರೆ ಬರ ಪರಿಹಾರ, ಶಾಲಾ ಕಟ್ಟಡ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಗಳಿಗೆ ಅನುದಾನ ಬಿಡುಗಡೆ ಮಾಡಬೇಕಿತ್ತು. ಕಲ್ಯಾಣ ಕರ್ನಾಟಕ ಭಾಗಕ್ಕೆ 3ಸಾವಿರ ಕೋಟಿ ರೂ.ಒಪ್ಪಿಗೆ ದೊರೆತಿದ್ದರೂ ಇದುವರೆಗೂ ಬಿಡುಗಡೆ ಮಾಡಿಲ್ಲ ಎಂದು ದೂರಿದರು.
ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲು ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಕಾರ್ಯಕರ್ತರನ್ನು ಮರೆತ್ತಿದ್ದರು. ಅವರು ಆಕ್ರೋಶಗೊಂಡಿದ್ದರಿಂದ ಸಮಾಧಾನಪಡಿಸಲು ಸಂವಿಧಾನ ಬಾಹಿರವಾಗಿ ಈ ಹುದ್ದೆ ನೀಡುತ್ತಿದ್ದು, ಬಹಿರಂಗವಾಗಿಯೇ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.