2 ತಿಂಗಳೊಳಗೆ ಭದ್ರಾ ಆನೆಧಾಮ ಕಾಮಗಾರಿ ಆರಂಭ : ಸಚಿವ ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
ಬೆಂಗಳೂರು: ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ ನಿರ್ಮಿಸಲುದ್ದೇಶಿಸಿರುವ ಆನೆಧಾಮದ ಕಾಮಗಾರಿ ಇನ್ನು ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಥಳ ಪರಿಶೀಲನೆ ಮಾಡಲಾಗಿದ್ದು, 53 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲು, ಡಿಪಿಆರ್ ಸಿದ್ಧವಾಗುತ್ತಿದೆ ಎಂದರು.
ಪ್ರತಿ ವರ್ಷ ಸರಾಸರಿ 50-60 ಜನರು ವನ್ಯಜೀವಿ- ಮಾನವ ಸಂಘರ್ಷದಿಂದ ಮೃತಪಡುತ್ತಿದ್ದಾರೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜನರ ಜೀವ ರಕ್ಷಿಸಲು ಸರಕಾರ ಶ್ರಮಿಸುತ್ತಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ರಾಜ್ಯದಲ್ಲಿ ಹಿಂದಿನ 21 ತಿಂಗಳ ಅವಧಿಯಲ್ಲಿ 1,203 ಪ್ರಕರಣಗಳಲ್ಲಿ 6,225 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಲಾಗಿದೆ. ಇದರ ಜೊತೆಗೆ 15,422 ಎಕರೆ ಜಮೀನನ್ನು ಅರಣ್ಯ ಎಂದು ಘೋಷಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಅರಣ್ಯದಂಚಿನಲ್ಲಿ ಬಿದಿರು ಬೆಳೆಸಿದರೆ ಅದು ಜೈವಿಕ ಮತ್ತು ಸ್ವಾಭಾವಿಕ ಬ್ಯಾರಿಕೇಡ್ನಂತೆ ಕಾರ್ಯ ನಿರ್ವಹಿಸುತ್ತದೆ. ಅರಣ್ಯ ಒತ್ತುವರಿ ತಡೆಯುತ್ತದೆ. ಜೊತೆಗೆ ಆನೆಗಳಿಗೆ ಆಹಾರವೂ ಆಗುತ್ತದೆ. ಇದರಿಂದ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಸಹಾಯವಾಗುತ್ತದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬಿದಿರು ಬೆಳೆಸಲು ಸೂಚನೆ ನೀಡಲಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.
ರಾಜಧಾನಿಯಲ್ಲಿ ಹಸಿರು ಹೊದಿಕೆಯ ರಕ್ಷಣೆ: ಬೆಂಗಳೂರು ಮಹಾನಗರದ ಯಲಹಂಕ ಬಳಿಯ ಮಾದಪ್ಪನ ಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಪ್ರದೇಶದಲ್ಲಿ ಲಾಲ್ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯಲ್ಲಿ ಬೃಹತ್ ಸಸ್ಯೋದ್ಯಾನ ನಿರ್ಮಿಸಲು ಕಾರ್ಯಯೋಜನೆ ರೂಪಿಸಲಾಗಿದೆ. ಡಿಪಿಆರ್ ಸಿದ್ಧವಾಗುತ್ತಿದ್ದು, ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಬೆಂಗಳೂರು ನಗರದ ಹೆಸರುಘಟ್ಟ ಕೆರೆ ಸುತ್ತಮುತ್ತಲ್ಲಿರುವ ಅಪರೂಪದ ಹುಲ್ಲುಗಾವಲು ರಕ್ಷಣೆಗಾಗಿ 5,678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ ಇದಕ್ಕೆ ಸಂಪುಟದ ಅನುಮೋದನೆಯೂ ದೊರೆತಿದೆ. ಈ ಮೂಲಕ ಬೆಂಗಳೂರಿನಲ್ಲಿ ಹಸಿರು ವಲಯ ರಕ್ಷಣೆಗೆ ಕ್ರಮ ವಹಿಸಲಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.
ಎಚ್ಎಂಟಿ ಪ್ರಕರಣ: ಮೇ ನಲ್ಲಿ ವಿಚಾರಣೆ
ಕೇಂದ್ರ ಸರಕಾರ ಸ್ವಾಮ್ಯದ ಎಚ್ಎಂಟಿ ತನ್ನ ವಶದಲ್ಲಿರುವ ಸುಮಾರು 14,300 ಕೋಟಿ ರೂ. ಮೌಲ್ಯದ 443 ಎಕರೆ ಅರಣ್ಯ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಮಾರಾಟ ಮಾಡುವುದನ್ನು ತಡೆಯಲಾಗಿದ್ದು, ಈ ಅರಣ್ಯ ಜಮೀನು ಹಿಂಪಡೆಯಲು ಕಾನೂನು ಹೋರಾಟ ಮಾಡಲಾಗುತ್ತಿದೆ. ಮೇ ತಿಂಗಳು ಪ್ರಕರಣ ವಿಚಾರಣೆಗೆ ಬರಲಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
ಬಡತನ ರೇಖೆಯಿಂದ ಹೊರಬಂದ 1 ಕೋಟಿ ಜನರು: ‘ನಮ್ಮ ಸರಕಾರ ಬಂದು 2 ವರ್ಷ ಪೂರೈಸುವ ಹೊಸ್ತಿಲಲ್ಲಿದೆ. ನಾವು 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದೇವೆ. ಈ ಯೋಜನೆಗಳ ಫಲವಾಗಿ ರಾಜ್ಯದಲ್ಲಿ 1 ಕೋಟಿಗೂ ಹೆಚ್ಚು ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ನಮ್ಮ ಸರಕಾರ ನುಡಿದಂತೆ ನಡೆಯುತ್ತಿದೆ ಇಂತಹ ಸರಕಾರದಲ್ಲಿ ಸಚಿವನಾಗಿದ್ದೇನೆ ಎಂಬ ಹೆಮ್ಮೆ ಸಂತೋಷ ನನಗಿದೆ’ ಎಂದು ಈಶ್ವರ್ ಖಂಡ್ರೆ ಹೇಳಿದರು.