ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರ : ಸರಕಾರದ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರಪತಿ ಮುರ್ಮು ಪತ್ರ
ರಾಷ್ಟ್ರಪತಿ ದ್ರೌಪದಿ ಮುರ್ಮು(PTI)/ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ವಿರುದ್ಧ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಂದಿಸಿದ್ದು, ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಇಮೇಲ್ ಸಂದೇಶವನ್ನು ಕಳುಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಸ್ವಯಂ ಹೇಳಿಕೆಯ ದೂರಿನ ಬಗ್ಗೆ ಸೂಕ್ತ ರೀತಿಯಲ್ಲಿ ಗಮನ ಹರಿಸಬೇಕು. ಅಲ್ಲದೇ, ನೀವು ತೆಗೆದುಕೊಳ್ಳುವ ಕ್ರಮದ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯಪಾಲರ ನಿರ್ಧಾರದ ಬಗ್ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆ.19ರಂದು ಇಮೇಲ್ ಮೂಲಕ ರಾಷ್ಟ್ರಪತಿಗೆ ದೂರು ಸಲ್ಲಿಸಿದ್ದರು. ಬಿಜೆಪಿ ಮತ್ತು ಜೆಡಿಎಸ್ ಒತ್ತಡಕ್ಕೆ ಮಣಿದು ರಾಜ್ಯಪಾಲರು ಕಾನೂನು ಬಾಹಿರವಾಗಿ ಮುಖ್ಯಮಂತ್ರಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ್ದಾರೆ. ಸ್ಪಷ್ಟ ಬಹುಮತದೊಂದಿಗೆ ಚುನಾಯಿತವಾಗಿರುವ ಸರಕಾರವನ್ನು ಅಸ್ಥಿರಗೊಳಿಸುವ ಮೂಲಕ ಸಂವಿಧಾನಕ್ಕೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.