ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯ; ಆ.29 ರಂದು ಚಾಲನೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ
ಮೈಸೂರು,ಆ.15: ಭಾರತ ದೇಶದ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಆ.29 ರಂದು ಎಲ್ಲಾ ಶಾಲಾ, ಕಾಲೇಜು ಮತ್ತು ವಿವಿಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿದ್ಯುಕ್ತ ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ನಗರದ ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನೂತನ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾರತದ ಸಂವಿಧಾನ ಪೀಠಿಕೆಯನ್ನು ಯುವ ಜನರಿಗೆ ಅರ್ಥ ಮಾಡಿಸಿದರೆ ದೇಶ ಸುಭಿಕ್ಷಗೊಳ್ಳಲಿದೆ. ಮುಂದಿನ ಯುವ ಪೀಳೀಗೆ ಉತ್ತಮ ಪ್ರಜೆಗಳಾಗುತ್ತಾರೆ. ಆ ನಿಟ್ಟಿನಲ್ಲಿ ನ್ಯಾಯ, ಸಮಾನತೆ, ಬ್ರಾತ್ವುತ್ವಗಳನ್ನು ಒಳಗೊಂಡಿರುವ ಭಾರತದ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜು ಮತ್ತು ವಿವಿಗಳಲ್ಲಿ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂವಿಧಾನ ಬರೆಯಲು ಆದೇಶಿಸಿದ ದಿನ ಆ.29 ಹಾಗಾಗಿ ಅಂದೇ ನಾವು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದಲು ವಿದ್ಯುಕ್ತವಾಗಿ ಚಾಲೆನೆ ನೀಡುತ್ತಿದ್ದೇವೆ ಎಂದು ಹೇಳಿದರು.
ಭಾರತದ ಇತಿಹಾಸದಲ್ಲಿ ಕರ್ನಾಟಕದಲ್ಲೇ ಮೊಟ್ಟ ಮೊದಲ ಬಾರಿಗೆ ಸಂವಿಧಾನ ಪೀಠಿಕೆಯನ್ನು ಓದಲು ಕಡ್ಡಾಯ ಗೊಳಿಸಲಾಗುತ್ತಿದೆ. ಭಾಷೆ, ಜಾತಿ, ಧಮದ ಹೆಸರಿನಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಮತ್ತು ಒಂದು ಸಮುದಾಯದ ವಕ್ತಾರರಂತೆ ಮಾತನಾಡುವುದನ್ನು ತಪ್ಪಿಸಲು ಯುವಜನರು ಸಂವಿಧಾನವನ್ನು ಅರ್ಥಮಾಡಿಕೊಳ್ಳಲು ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಹೊಸ ಕಟ್ಟಡಕ್ಕೆ ಶಿಫ್ಟ್ ಆದ ಮೇಲೆ ಜನರ ಅಭಿವೃದ್ಧಿಗೆ ಅನುಕೂಲವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲೇ ಪ್ರಾರಂಭ ಮಾಡಲಾಗಿದೆ. ಸಾರ್ವಜನಿಕರ ಕೆಸಲ ಕಾರ್ಯಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದು ಹೇಳಿದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕಾರ್ಯದರ್ಶಿ ಎನ್.ರವಿಕುಮಾರ್, ತಹಶೀಲ್ದಾರ್ ಶಿವಪ್ರಸಾದ್ ಸೇರಿದಂತೆ ಹಲವರು ಉಪಸ್ಥಿರಿದ್ದರು.