ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಅಪಘಾತ; ಕರ್ನಾಟಕದ ಮೂವರು ಯೋಧರು ಮೃತ್ಯು
ದಯಾನಂದ ತಿರಕಣ್ಣವರ, ಅನೂಪ್ ಪೂಜಾರಿ, ಮಹೇಶ್ ಮಾರಿಗೊಂಡ
x.com/prajavani
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರ ಸಹಿತ ಐವರು ಯೋಧರು ಹುತಾತ್ಮರಾಗಿದ್ದಾರೆ.
ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬೀಜಾಡಿಯ ಅನೂಪ್ (31) ಬಾಗಲಕೋಟೆಯ ಮಹೇಶ್ ಮಾರಿಗೊಂಡ (25 ) ಮೃತ ಯೋಧರು. ಇನ್ನಿಬ್ಬರು ಮಹಾರಾಷ್ಟ್ರದವರು.
ಯೋಧರು ಸೇನಾ ವಾಹನದಲ್ಲಿ ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಕಿರಿದಾದ ರಸ್ತೆಯಲ್ಲಿ 150 ಅಡಿ ಆಳದ ಪ್ರಪಾತಕ್ಕೆ ವಾಹನ ಉರುಳಿ ಬಿದ್ದು ಅಪಘಾತ ಸಂಭವಿಸಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಉಡುಪಿ ಜಿಲ್ಲೆ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ.
ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ನಾಗಪ್ಪ ಮಾರಿಗೊಂಡ ಅವರು 11 ನೆ ಮರಾಠ ರೆಜಿಮೆಂಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಬೆಳಗಾವಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ಅವರು, ಕೆಲವು ವರ್ಷಗಳಿಂದ ಸೇನೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು.
ಯೋಧರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
— Siddaramaiah (@siddaramaiah) December 25, 2024
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ದೇಶ ಸೇವೆಗಾಗಿ ಜೀವ… pic.twitter.com/K5mDBIn8sS
‘ಜಮ್ಮು-ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ’
-ಸಿದ್ಧರಾಮಯ್ಯ, ಮುಖ್ಯಮಂತ್ರಿ
‘ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಆಯತಪ್ಪಿ ಉರುಳಿಬಿದ್ದಿರುವ ರಣಭೀಕರ ಅಪಘಾತದಲ್ಲಿ ಐವರು ಯೋಧರು ಮೃತಪಟ್ಟಿರುವ ದಾರುಣ ಘಟನೆ ತಿಳಿದು ದುಃಖವಾಯಿತು. ಐವರು ಯೋಧರ ಪೈಕಿ ಮೂವರು ಕನ್ನಡಿಗಡಿ ಅಗಲಿಕೆಯಿಂದ ಭಾರತಮಾತೆ ತನ್ನ ವೀರಪುತ್ರರನ್ನು ಕಳೆದುಕೊಂಡಂತಾಗಿದೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟು ಕರ್ತವ್ಯ ನಿರ್ವಹಿಸುತ್ತಿದ್ದ ಹೆಮ್ಮೆಯ ಯೋಧರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಈ ಆಘಾತದ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ’
-ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ