ಕನ್ನಡ ಸಾಹಿತ್ಯ ಸಮ್ಮೇಳನ | ಎಲ್ಲ ಕಾರ್ಯಕ್ರಮಗಳಲ್ಲೂ ‘ಸುವರ್ಣ ಸಂಭ್ರಮ’ ಲಾಂಛನ ಬಳಸಲು ಸೂಚನೆ
ಬೆಂಗಳೂರು : ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಅಖಿಲ ಭಾರತ 87ನೆ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಸಾಪ ನಡೆಸುವ ಪತ್ರ ವ್ಯವಹಾರವು ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೆ ವರ್ಷದ ಸುವರ್ಣ ಸಂಭ್ರಮ ಲಾಂಛನವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನಿರ್ದೇಶನ ನೀಡಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಜಂಟಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನ ನಡೆಸಲು ಸೂಕ್ತ ಸ್ಥಳಾವಕಾಶ ಗುರುತಿಸಬೇಕಿದೆ. ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ವಾಹನ ನಿಲುಗಡೆಯ ಸ್ಥಳಗಳು ಅಂತರದಲ್ಲಿದ್ದರೆ, ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಈ ಎರಡೂ ಸ್ಥಳಗಳು ಸಮೀಪವಿರುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಸಮ್ಮೇಳನಕ್ಕೆ ಒಟ್ಟು 30 ಕೋಟಿ ರೂ.ಅನುದಾನ ಅಗತ್ಯವಿದೆ ಎಂದು ಪರಿಷತ್ತಿನ ಅಧ್ಯಕ್ಷರು ಕೋರಿದ್ದಾರೆ. ಈ ಬಗ್ಗೆ ಸರಕಾರ ಶೀಘ್ರವೇ ಕ್ರಮಕೈಗೊಂಡು ತಿಳಿಸಲಾಗುವುದು. ಕಾರ್ಯಕ್ರಮದ ಆಯೋಜನೆಯ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸಬೇಕು ಎಂದು ಶಿವರಾಜ್ ತಂಗಡಗಿ ಅವರು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಈಗಾಗಲೇ ಸಮ್ಮೇಳನ ಆಯೋಜನೆಗೆ ಎರಡು ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಇದರಲ್ಲಿ ಯಾವುದು ಸೂಕ್ತ ಎಂಬುದನ್ನು ಜಿಲ್ಲಾಡಳಿತ ನಿರ್ಧರಿಸಲಿ. ಸ್ಥಳ ನಿಗದಿಯಾದರೆ, ಅಲ್ಲಿಗೆ ಬೇಕಾದ ಅನುಕೂಲಗಳನ್ನು ಕಲ್ಪಿಸುವ ಕೆಲಸವನ್ನು ಆರಂಭಿಸಬಹುದು ಎಂದರು.
ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಮಾತನಾಡಿ, ಸಮ್ಮೇಳನಕ್ಕೆ ಅದರದೇ ವಿಶೇಷ ಮಹತ್ವವಿದೆ. ಈ ಸಮ್ಮೇಳನಕ್ಕೆ ಅಮೆರಿಕಾದಿಂದ ಅನೇಕ ಗಣ್ಯರು ಆಗಮಿಸುತ್ತಾರೆ. 87ನೆ ಸಮ್ಮೇಳನವಾಗಿರುವುದರಿಂದ 87 ಮಂದಿ ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಉದಯ ಕೆ.ಎಂ, ಪಿ.ಎಂ.ನರೇಂದ್ರಸ್ವಾಮಿ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ, ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.