ಸಿನೆಮಾ ಪ್ರೋತ್ಸಾಹಕ್ಕೆ ಓಟಿಟಿ, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.: ಸಿದ್ದರಾಮಯ್ಯ

ಸಾಂದರ್ಭಿಕ ಚಿತ್ರ | PC : Meta AI
ಬೆಂಗಳೂರು : ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರ 200 ರೂ.ಗಳಿಗೆ ಸೀಮಿತ ಹಾಗೂ ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಓಟಿಟಿ ವೇದಿಕೆಯನ್ನು ಸೃಜಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ನಮ್ಮ ಸರಕಾರವು ಸಿನಿಮಾ ಕ್ಷೇತ್ರಕ್ಕೆ ಒದಗಿಸಲಿದೆ ಎಂದು ಹೇಳಿದರು.
ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಛಯವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದೂ ಪ್ರಕಟಿಸಿದರು.
ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.