ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ: ಸಂಪುಟ ನಿರ್ಧಾರ
ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರುಗಿದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ಬಳಿಕ ಆಕ್ಷೇಪಣೆಗಳನ್ನು ಪರಿಗಣಿಸಿ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದರು.
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕøತ ಅಂದಾಜು ಮೊತ್ತ 142.47 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಯಚೂರು ವಿವಿ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ 47.32 ಕೋಟಿ ರೂ.ಮೊತ್ತದಲ್ಲಿ ನಿರ್ಮಾಣ ಕಾರ್ಯಕ್ಕೂ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಪ್ರಸಕ್ತ ವಾರ್ಷಿಕ ಸಾಲಿನ 93ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಿಗೆ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ಹಾಗೂ ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು 263 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಾಟೀಲ್ ಹೇಳಿದರು.
ಬೆಳಗಾವಿ ಜಿಲ್ಲೆಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು 287.55 ಕೋಟಿ ರೂ.ಗಳಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ 519.10 ಕೋಟಿ ರೂಪಾಯಿ ಅಂದಾಜು ಮೊತ್ತದ ಪರಿಷ್ಕøತ ಯೋಜನಾ ವರದಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ಉಲ್ಲೇಖಿಸಿದರು.
ರಾಯಚೂರು ತಾಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ 158.10 ಕೋಟಿ ರೂ.ಗಳ ಯೋಜನಾ ವರದಿ. ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕøತ ಅಂದಾಜು ಮೊತ್ತ 499 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ ಎಚ್.ಕೆ.ಪಾಟೀಲ್ ತಿಳಿಸಿದರು.
ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಅಂದರೆ ಮಹತ್ವಾಕಾಂಕ್ಷಿ ತಾಲೂಕುಗಳಾದ ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿ 52.81 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲು ಹಾಗೂ ಮಹತ್ವಾಕಾಂಕ್ಷಿ ತಾಲೂಕುಗಳಲ್ಲದ ಆನೇಕಲ್, ಕಲಬುರ್ಗಿ, ಮೈಸೂರು ಸಂಸ್ಥೆಗಳಲ್ಲಿ 47.18 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ 1,200 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಲಾಂಡ್ರಿ ಕಟ್ಟಡ, ಎಸ್ಟಿಪಿ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು 150 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕøತ ಅಂದಾಜು ಮೊತ್ತ 455 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂತದಲ್ಲಿ 208.45 ಕೋಟಿ ರೂ. ಅಂದಾಜು ಮೊತ್ತದ ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 2023ರ ಡಿಸೆಂಬರ್ 31ಕ್ಕೆ ಅನ್ವಯಿಸುವಂತೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.