ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಹೈಕೋರ್ಟ್ ತಡೆ

ರಾಹುಲ್ ಗಾಂಧಿ (Photo: PTI)
ಧಾರವಾಡ: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಜಾಹೀರಾತು ನೀಡಿದ್ದ ಪ್ರಕರಣಕ್ಕೆ ಕುರಿತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿರುವ ಮಾನಹಾನಿ ದಾವೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿದೆ.
ಬಿಜೆಪಿ ಹೂಡಿರುವ ಮಾನಹಾನಿ ದಾವೆ ರದ್ದು ಕೋರಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮೇಲಿನ ಆದೇಶ ನೀಡಿದೆ.
ರಾಹುಲ್ ಗಾಂಧಿ ಪರ ಹಿರಿಯ ವಕೀಲ ಕೆ. ಶಶಿಕಿರಣ್ ಶೆಟ್ಟಿ ಅವರು ಬಿಜೆಪಿಯು ಜಾಹೀರಾತನ್ನು ತಪ್ಪಾಗಿ ಅರ್ಥೈಸಿದೆ. ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕು ಮನವಿ ಮಾಡಿದರು. ವಾದ ಆಲಿಸಿದ ಪೀಠವು ರಾಹುಲ್ ಗಾಂಧಿ ಅವರ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಪ್ರತಿವಾದಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಚಾರಣೆಯನ್ನು ಫೆ. 20ಕ್ಕೆ ಮುಂದೂಡಿತು.
2023ರ ಜೂನ್ನಲ್ಲಿ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಸಿ ಸೆಕ್ಷನ್ಗಳಾದ 499 ಮತ್ತು 500ರ ಅಡಿ ಕಾಂಗ್ರೆಸ್, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಸಂಜ್ಞೇ ಪರಿಗಣಿಸಿತ್ತು.