ಕೆರೆಗೋಡು ಧ್ವಜ ವಿವಾದ | ಚುನಾವಣೆ ಹಿನ್ನೆಲೆಯಲ್ಲಿ ಗಲಭೆ ಸೃಷ್ಟಿಸಲು ಬಿಜೆಪಿ ಯತ್ನ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ‘ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಡ್ಯ ತಾಲೂಕು ಕೆರಗೋಡು ಗ್ರಾಮದ ಧ್ವಜ ವಿವಾದ ಸಂಬಂಧ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ರವಿವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ‘ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
‘ಮಂಡ್ಯ ತಾಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾ.ಪಂ. ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
‘ಅವರ ಮನವಿಯ ಮೇರೆಗೆ ಗ್ರಾ.ಪಂ.ಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.
‘ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ಸರಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
‘ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು’
-ಸಿದ್ದರಾಮಯ್ಯ ಮುಖ್ಯಮಂತ್ರಿ