ಅಪಹರಣ ಪ್ರಕರಣ | ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ಹೊಸದಿಲ್ಲಿ : ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಅಪಹರಣ ಪ್ರಕರಣದಲ್ಲಿ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ವಿಶೇಷ ತನಿಖಾ ತಂಡ (ಎಸ್ ಐ ಟಿ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ನೋಟಿಸ್ ಹೊರಡಿಸಿದೆ.
ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡ ನ್ಯಾ.ಸೂರ್ಯಕಾಂತ ನೇತೃತ್ವದ ಪೀಠವು, ಈ ವಿಷಯದಲ್ಲಿ ಉತ್ತರವನ್ನು ಕೋರಿ ಭವಾನಿ ರೇವಣ್ಣ ಅವರಿಗೆ ನೋಟಿಸ್ ಹೊರಡಿಸಿತು.
ನ್ಯಾ.ಉಜ್ಜಲ್ ಭುಯಾನ್ ಅವರನ್ನೂ ಒಳಗೊಂಡಿದ್ದ ಪೀಠವು ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ವಹಿಸಿದ್ದರೆನ್ನಲಾದ ಪಾತ್ರ ಕುರಿತು ಎಸ್ ಐ ಟಿ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ಸಿಬಲ್, ಸಂತ್ರಸ್ತ ಮಹಿಳೆ ಸಿಆರ್ಪಿಸಿಯ ಕಲಂ 164ರಡಿ ದಾಖಲಿಸಿರುವ ಹೇಳಿಕೆಯಲ್ಲಿ ತನ್ನ ಅಪಹರಣದಲ್ಲಿ ಭವಾನಿ ರೇವಣ್ಣ ಅವರ ಪಾತ್ರವನ್ನು ವಿವರಿಸಿದ್ದಾರೆ ಎಂದು ತಿಳಿಸಿದರು.
ಈ ಮನವಿಯು ಮಹಿಳೆಯ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು, ಈ ವಿಷಯವನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ ಎಂದು ಎಚ್ಚರಿಕೆಯನ್ನು ನೀಡಿತು.
ಜೂ.18ರಂದು ಕರ್ನಾಟಕ ಉಚ್ಚ ನ್ಯಾಯಾಲಯವು ಅಶ್ಲೀಲ ವೀಡಿಯೊ ಹಗರಣಕ್ಕೆ ಸಂಬಂಧಿಸಿದ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿತ್ತು.
ಭವಾನಿ ರೇವಣ್ಣ ಅವರು ಪ್ರಸ್ತುತ ಮನೆಗೆಲಸದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಮಹಿಳೆ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯವನ್ನು ಅನುಭವಿಸಿದ್ದರು ಎಂದು ಹೇಳಲಾಗಿದೆ.