ಅನಧಿಕೃತ ಬಡಾವಣೆ ನಿರ್ಮಿಸಿದರೆ ಸರಕಾರದಿಂದ ಮುಟ್ಟುಗೋಲು : ಸಚಿವ ಕೃಷ್ಣಭೈರೇಗೌಡ
ಕೃಷ್ಣಭೈರೇಗೌಡ
ಬೆಂಗಳೂರು : ರಾಜ್ಯದಲ್ಲಿ ಇನ್ನು ಮುಂದೆ ಅಕ್ರಮ ಹಾಗೂ ಅನಧಿಕೃತ ಬಡಾವಣೆಗಳನ್ನು ನಿರ್ಮಾಣ ಮಾಡಿದರೆ ಅಂತಹ ಬಡಾವಣೆಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೋಂದಣಿಯಿಲ್ಲದೆ, ಅನುಮತಿ ಪಡೆಯದೆ ಅನಧಿಕೃತ, ಅಕ್ರಮ ಬಡಾವಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಲೇಬೇಕು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಸುಪ್ರೀಂ ಕೋರ್ಟ್ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದೆ. ಸಿಎಂ ಸಿದ್ದರಾಮಯ್ಯ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂದಿದ್ದಾರೆ. ಕೃಷಿ ಜಮೀನಿನಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ಸರಕಾರ ದಿಟ್ಟ ಕ್ರಮ ತೆಗೆದುಕೊಳ್ಳುತ್ತದೆ. ಯಾರು ಅಕ್ರಮ ಬಡಾವಣೆ ನಿರ್ಮಾಣ ಮಾಡಬಾರದು ಎಂದು ಕೃಷ್ಣಬೈರೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಭೂ ಮಾಪನಾ ಇಲಾಖೆ ಆಯುಕ್ತ ಮಂಜುನಾಥ್ ಉಪಸ್ಥಿತರಿದ್ದರು.