ದೀಪಾವಳಿ ಪ್ರಯುಕ್ತ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದ ಕೆಎಸ್ಸಾರ್ಟಿಸಿ
ಸಾಂದರ್ಭಿಕ ಚಿತ್ರ
ಬೆಂಗಳೂರು : ಅ.31ರಂದು ನರಕ ಚತುರ್ದಶಿ ನ.1ರಂದು ಕನ್ನಡ ರಾಜ್ಯೋತ್ಸವ ನ.2ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಅ.30ರಿಂದ ನ.1ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 2 ಸಾವಿರ ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ.3, 4ರಂದು ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟ್ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸಬೇಕು. ಇ-ಟಿಕೇಟ್ ಬುಕಿಂಗ್ನ್ನು www.ksrtc.karnataka.gov.in ವೆಬ್ಸೈಟ್ ಮುಖಾಂತರ ಮಾಡಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ, ಬರುವ ಪ್ರಯಾಣದ ಟಿಕೇಟ್ನ್ನು ಒಮ್ಮೆಲೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್ಸೈಟ್ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.