ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬರಪರಿಹಾರ ಇದುವರೆಗೆ ಜನರಿಗೆ ತಲುಪಿಲ್ಲ ಎಂಬ ಕುಮಾರಸ್ವಾಮಿ ಟೀಕೆಗೆ ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಅವರು "ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರ ಸರಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ" ಎಂದು ಅವರು ತಿಳಿಸಿದರು.
ಹೊಸದಿಲ್ಲಿಯಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.