ದಿನಕ್ಕೊಂದು ವೇಷ ತೊಡುವ ಕುಮಾರಸ್ವಾಮಿ; ‘ಕೋಮು-ಕುಂಡ’ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ತೆನೆ ಹೊತ್ತ ಮಹಿಳೆ: ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು, ಅ. 19: ‘ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ ‘ಕೋಮು-ಕುಂಡ’ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೈ ಹಿಡಿದರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ‘ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ. ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿದ್ದೀರಿ’ ಎಂದು ಲೇವಡಿ ಮಾಡಿದೆ.
ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. ‘ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ’ ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು’ ಎಂದು ದೂರಿದೆ.
ಕಾಂಗ್ರೆಸ್ ದಯಾಭಿಕ್ಷೆಯಿಂದ 2ನೆ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ. ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50ಕೋಟಿ ರೂ.ನಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ.ಟಿ.ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ... ನಿಮಗೇನಾದರೂ ಆತ್ಮಗೌರವ ಇದೆಯೇ?’ ಎಂದು ಪ್ರಶ್ನಿಸಿದೆ.
‘ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ ಎಂದು ಟೀಕಿಸಿದೆ.
‘ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೆÇರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತ ಆದಿ ಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!’ ಎಂದು ವ್ಯಂಗ್ಯವಾಡಿದೆ.
ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ. ಕುಮಾರಸ್ವಾಮಿಯವರೇ, ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ?. ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
‘ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ, ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!’ ಎಂದು ಲೇವಡಿ ಮಾಡಿದೆ.