ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿ.ಕೆ.ಶಿವಕುಮಾರ್
PHOTO: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು " ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಪಕ್ಷದ ಅಧ್ಯಕ್ಷರಾಗಿದ್ದವರು. ಅವರು ಆ ಸ್ಥಾನಗಳಿಗೆ ತಕ್ಕಂತೆ ಗೌರವ ಉಳಿಸಿಕೊಳ್ಳಬೇಕು. ದೇವೇಗೌಡರು, ಯಡಿಯೂರಪ್ಪ, ಎಸ್.ಎಂ.ಕೃಷ್ಣ, ವೀರಪ್ಪ ಮೊಯ್ಲಿ, ಸದಾನಂದಗೌಡರು, ಬಸವರಾಜ ಬೊಮ್ಮಾಯಿ ಕೂಡ ಮಾಜಿ ಮುಖ್ಯಮಂತ್ರಿಗಳು. ಅವರು ಇವರಂತೆ ಸುಮ್ಮನೆ ಮಾತನಾಡುತ್ತಾರಾ? " ಎಂದು ಶಿವಕುಮಾರ್ ಹೇಳಿದರು.
ಕುಮಾರಸ್ವಾಮಿ ಬೆಳಗ್ಗೆಯಿಂದ ಸಂಜೆವರೆಗೂ ಮನಸ್ಸಿಗೆ ಬಂದಂತೆ ಮಾತನಾಡಿದರೆ ಪ್ರಯೋಜನವಿಲ್ಲ. ಮಾಜಿ ಮುಖ್ಯಮಂತ್ರಿ ಮಾತು, ವರ್ತನೆ ಎಂದರೆ ನಾವು ಹೆದರಿ ಗಡ, ಗಡ ನಡಗುವಂತೆ ಇರಬೇಕು ಎಂದು ಅವರು ಹೇಳಿದರು.
ನಮ್ಮ ಮಾಜಿ ಶಾಸಕ ಯತೀಂದ್ರ ತಮ್ಮ ತಂದೆಗಾಗಿ ಸ್ಥಾನ ತ್ಯಾಗ ಮಾಡಿದವರು. ನಾವು ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಅವರನ್ನು ಎಂಎಲ್ಸಿ ಮಾಡುತ್ತೇವೆ ಎಂದರೂ ಅದನ್ನು ಬೇಡ ಎಂದವರು. ಆತ ತಂದೆಯ ಕ್ಷೇತ್ರದಲ್ಲಿ ಕೆಡಿಪಿ ಸದಸ್ಯನಾಗಿ ಕೆಲಸದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವರಿಗೆ ನೂರಾರು ಕೆಲಸಗಳಿರುತ್ತವೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ನಮ್ಮ ಕ್ಷೇತ್ರದಲ್ಲೂ ಅಧಿಕಾರಿಗಳ ವರ್ಗಾವಣೆ ಅರ್ಜಿ ಇಟ್ಟುಕೊಂಡು ಅನೇಕರು ಬರುತ್ತಾರೆ. ಹಾಗೆಂದು ಯತೀಂದ್ರ ವರ್ಗಾವಣೆ ಮಾಡಿದ್ದಾರೆ ಎಂದು ಅರ್ಥವಲ್ಲ. ಅವರು ಶಾಸಕರಲ್ಲದಿದ್ದರೂ ಕ್ಷೇತ್ರದ ಜನರ ಕೆಲಸ ಮಾಡುತ್ತಿದ್ದಾರೆ. ಅದನ್ನು ನೋಡಿ ಖುಷಿಪಡಬೇಕು. ಈ ರೀತಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಶಿವಕುಮಾರ್ ತಿರುಗೇಟು ನೀಡಿದರು.
ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು " ಈ ವಿಚಾರ ಪ್ರಸ್ತಾಪ ಮಾಡಲೇಬೇಕು. ಈ ವಿಚಾರದ ಜತೆಗೆ ಅವರು ಇದುವರೆಗೂ ಜನತೆಗೆ ಕೊಟ್ಟ ಮಾತನ್ನು ಬಿಚ್ಚಿಟ್ಟು ಚರ್ಚೆ ಮಾಡಲಿ. ಪಕ್ಷದ ಅಧ್ಯಕ್ಷರಾಗಿ ಅವರಿಗೆ ವಿಚಾರ ಪ್ರಸ್ತಾಪಿಸುವ ಹಕ್ಕಿದೆ. ಅದನ್ನು ನಾನೇಕೆ ಕಿತ್ತುಕೊಳ್ಳಲಿ " ಎಂದರು
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಮ್ಮನ್ನು ಭೇಟಿ ಮಾಡಿದ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಪಕ್ಷದ ಶಾಸಕರು ಕೆಲಸದ ವಿಚಾರವಾಗಿ ನನ್ನನ್ನು ಭೇಟಿ ಮಾಡುತ್ತಾರೆ. ನನಗೆ ಅನೇಕ ಸ್ನೇಹಿತರಿದ್ದಾರೆ. ಅವರ ಜೊತೆ ಊಟ, ಚರ್ಚೆ ಮಾಡುತ್ತೇವೆ. ಕುಮಾರಸ್ವಾಮಿ ಕೂಡ 40 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಏನು ಬಿಜೆಪಿಯ ವಕ್ತಾರರೇ? ಎಂದು ಪ್ರಶ್ನಿಸಿದರು.
ಆರ್. ಅಶೋಕ್ ಸರಕಾರಕ್ಕೆ ಮಾರ್ಗದರ್ಶನ ನೀಡಲಿ ಅವರು ಏಳು ಬಾರಿ ಗೆದ್ದಿದ್ದು, ಹಿರಿಯ ನಾಯಕರಿದ್ದಾರೆ. ಅವರಿಗೆ ದೊಡ್ಡ ಸ್ಥಾನ ಸಿಕ್ಕಿದೆ. ವಿರೋಧ ಪಕ್ಷದ ಸ್ಥಾನ ಎಂದರೆ ಸಂವಿಧಾನದ ಮೂಲಕ ಕೊಟ್ಟಿರುವ ಸ್ಥಾನ. ಅವರಿಗೆ ಈ ಸ್ಥಾನ ಸಿಕ್ಕಿರುವುದು ಸಂತೋಷ ಎಂದು ಶಿವಕುಮಾರ್ ಹೇಳಿದರು.