ಮೇಕೆದಾಟು ಯೋಜನೆಗೆ ಕೇಂದ್ರ ಕೈಜೋಡಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಳಗಾವಿ: ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಮತ್ತಿತರ ನಗರಗಳಿಗೆ ಕುಡಿಯುವ ನೀರು ಪೂರೈಸುವ ಮತ್ತು ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ನಮ್ಮ ಸರಕಾರ ಸಿದ್ದವಿದೆ. ಇದಕ್ಕೆ ಕೇಂದ್ರ ಸರಕಾರ ನಮ್ಮ ಜತೆ ಕೈ ಜೋಡಿಸಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನೀರು, ನಮ್ಮ ಹಕ್ಕು. ನಿಮ್ಮ ನೀರು, ನಿಮ್ಮ ಹಕ್ಕು ಎಂಬ ತತ್ವದ ಮೇಲೆ ಹೋರಾಟ ಮಾಡೋಣ. ಯೋಜನೆ ಅನುಷ್ಠಾನವಾಗುವುದರಿಂದ ತಮಿಳುನಾಡಿಗೆ ನಮಗಿಂತಲೂ ಹೆಚ್ಚಿನ ಅನುಕೂಲವಾಗಲಿದೆ. ನಮಗೆ 400 ಮೆ.ವ್ಯಾ. ವಿದ್ಯುತ್ ಉತ್ಪಾದನೆಗೆ ಅವಕಾಶ ಸಿಕ್ಕರೆ, ಅವರಿಗೆ ಇನ್ನೂ ಹೆಚ್ಚಿನ ಕುಡಿಯುವ ನೀರಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯೋಜನೆಯನ್ನು ನಮ್ಮ ನೆಲದಲ್ಲೇ ಆರಂಭಿಸಿದರೂ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಈ ಇಲಾಖೆಗಳ ಒಪ್ಪಿಗೆ ಇಲ್ಲದೆ, ಯೋಜನೆ ಪ್ರಾರಂಭಿಸಲಾಗುವುದು. ಈ ಯೋಜನೆಯಿಂದ ಶಾಶ್ವತ ಪರಿಹಾರ ದೊರೆಯಲಿದೆ. ಸಂಕಷ್ಟ ಪರಿಸ್ಥಿತಿಯೂ ನಿವಾರಣೆಯಾಗಲಿದೆ ಎಂದು ಅವರು ಹೇಳಿದರು.