ಲೋಕಸಭಾ ಚುನಾವಣೆ: ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ(ಜ.19) ಕಾಂಗ್ರೆಸ್ ಸಭೆ
ಬೆಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಾಳೆ(ಜ.19) ನಡೆಯಲಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಸ್ಕ್ರಿನಿಂಗ್ ಕಮಿಟಿ ಅಧ್ಯಕ್ಷ ಹರೀಶ್ ಚೌದರಿ ಸೇರಿದಂತೆ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಚರ್ಚೆ ನಡೆಸಿದ ಬಳಿಕ ಸಂಭವನೀಯ ಅಭ್ಯರ್ಥಿಳ ಪಟ್ಟಿಯನ್ನು ಅಧಿಕೃತವಾಗಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಅಲ್ಲಿ ಜನವರಿ ಅಂತ್ಯದ ವೇಳೆಗೆ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷವು ರಾಜ್ಯದ 28 ಕ್ಷೇತ್ರಗಳ ಪೈಕಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಹೊಂದಿದೆ. ಆ ನಿಟ್ಟಿನಲ್ಲಿ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಕಸರತ್ತು ನಡೆಸುತ್ತಿದೆ. ಈಗಾಗಲೇ ಸಚಿವರ ನೇತೃತ್ವದಲ್ಲಿ ವೀಕ್ಷಕರ ಸಮಿತಿಗಳನ್ನು ರಚಿಸಿ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಕೆಲವು ಕ್ಷೇತ್ರಗಳ ವರದಿ ಪಡೆದುಕೊಳ್ಳಲಾಗಿದೆ. ಹೀಗಾಗಿ ನಾಳೆ ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ.