ಸಹಕಾರಿ ಸಂಸ್ಥೆಗಳ ಮಧ್ಯಮಾವಧಿ-ದೀರ್ಘಾವಧಿ ಕೃಷಿ ಸಾಲ; ‘ಬಡ್ಡಿ ಮನ್ನಾ’ ಮಾಡಿ ಸರಕಾರ ಆದೇಶ
ಬೆಂಗಳೂರು: ರಾಜ್ಯದ ಸಹಕಾರಿ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿ.31ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡ್ಡಿ ಮನ್ನಾ ಸಂಬಂಧ ಘೋಷಣೆ ಮಾಡಿದ್ದರು. ಇದೀಗ ಸರಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ರೈತರು ರಾಜ್ಯದ ಸಹಕಾರ ಸಂಘಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು 31.12.2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಫೆ.29, 2024ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮಂಜೂರಾತಿ ನೀಡಲಾಗಿದೆ.