ಕರಾವಳಿಯಲ್ಲಿ ಜು.11ರವರೆಗೆ ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ \ Photo: PTI
ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಜು.11ರ ವರೆಗೆ ಆರೇಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲ್ಬುರ್ಗಿ ಜಿಲ್ಲೆ, ಯಾದಗಿರಿ ಜಿಲ್ಲೆಗೆ ಜು.8ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಜು.10ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗ 30 ರಿಂದ 40 ಕಿಲೋಮೀಟರ್ ಪ್ರತಿ ಘಂಟೆಗೆ ಬೀಸಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಬೀಳಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ನಿರಂತರ ಗಾಳಿ ಮತ್ತು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಬಹುದಾಗಿದೆ ಎಂದು ತಿಳಿಸಿದೆ.