‘ವಯನಾಡ್ ಭೂಕುಸಿತʼ ರಾಜ್ಯಕ್ಕೂ ಎಚ್ಚರಿಕೆ ಗಂಟೆ : ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ಕೇರಳದ ವಯನಾಡ್ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ 94ಕ್ಕೂ ಅಧಿಕ ಜನರು ಮೃತಪಟ್ಟಿರುವ ದುರ್ಘಟನೆಗೆ ಆಘಾತ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಇದು ನಮ್ಮ ರಾಜ್ಯಕ್ಕೂ ಎಚ್ಚರಿಕೆಯ ಗಂಟೆ ಎಂದು ತಿಳಿಸಿದ್ದಾರೆ.
ಸ್ವಾಭಾವಿಕ, ಪ್ರಕೃತಿ ದತ್ತವಾದ ಗುಡ್ಡಗಳ ತಲೆ ಕಡಿದು ತೋಟ, ಮನೆ, ರೆಸಾರ್ಟ್ ಮಾಡುತ್ತಿರುವುದರಿಂದ ಇಂತಹ ದುರ್ಘಟನೆಗಳು ಹೆಚ್ಚಾಗುತ್ತಿವೆ. ತಮ್ಮ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಮರಗಳ ಅಕ್ರಮ ಕಡಿತಲೆ ಹಾಗೂ ಹುಲ್ಲುಗಾವಲಿನ (ಶೋಲಾ ಅರಣ್ಯ) ನಾಶವೂ ದುರಂತಕ್ಕೆ ಕಾರಣವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದಕ್ಕೆ ಕಡಿವಾಣ ಹಾಕುವ ಅಗತ್ಯವನ್ನು ಇದು ಮತ್ತೊಮ್ಮೆ ಒತ್ತಿ ಹೇಳಿದೆ ಎಂದು ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ: ಉತ್ತರ ಕನ್ನಡದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ನಡೆದಿರುವ ಈ ಭೀಕರ ದುರ್ಘಟನೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಹಲವು ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ತಲೆ ಎತ್ತುತ್ತಿರುವ ವಸತಿ ಪ್ರದೇಶ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಟ್ಟುನಿಟ್ಟಿನ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.