ಶಕ್ತಿ, ಗೃಹಲಕ್ಷ್ಮಿ ಯೋಜನೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಲಭ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಲಿಂಗತ್ವ ಅಲ್ಪಸಂಖ್ಯಾತರಿಗೂ ಲಭ್ಯವಾಗಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಯಡಿ ಲಿಂಗತ್ವ ಅಲ್ಪಂಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಝೆಂಡರ್ಸ್ ಸರ್ಟಿಫಿಕೇಷನ್ ವತಿಯಿಂದ ಗುರುತಿನ ಚೀಟಿ ಮತ್ತು ಪ್ರಮಾಣಪತ್ರ ಹೊಂದಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಈ ಯೋಜನೆಯಡಿ ಮಾಸಿಕ 2ಸಾವಿರ ರೂ.ಗಳನ್ನು ನೀಡಲಾಗುತ್ತಿದೆ ಎಂದರು.
2011ರ ಜನಗಣತಿಯ ಪ್ರಕಾರ, ರಾಜ್ಯದಲ್ಲಿ 20,266 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಮುದಾಯ ಆಧಾರಿತ ಸಂಸ್ಥೆಗಳಿಂದ ಪಡೆದ ಅಂಕಿ-ಅಂಶಗಳ ಪ್ರಕಾರ 43,752 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ಇನ್ನೂ, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2012-13ನೆ ಸಾಲಿನಿಂದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆದಾಯ ಉತ್ಪನ್ನ ಚಟುವಟಿಕೆಯನ್ನು ಕೈಗೊಳ್ಳಲು 30 ಸಾವಿರ ರೂ.ಗಳ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯಡಿ ಈವರೆಗೂ 9,211 ಲಿಂಗತ್ವ ಅಲ್ಪಸಂಖ್ಯಾತರಿಗೆ ಸಾಲ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು.
ಹಾಗೇ, ಮೈತ್ರಿ ಯೋಜನೆಯಡಿ ಒಟ್ಟು 2052 ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಿಕ 1,200 ರೂ. ಪಿಂಚಣಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಜ್ಯ ಸರ್ಕಾರದ ನೌಕರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.