ಶೀಘ್ರವೇ ಜುಲೈ-ಆಗಸ್ಟ್ ತಿಂಗಳ ʼಗೃಹಲಕ್ಷ್ಮಿʼ ಯೋಜನೆಯ ಹಣ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಚಿತ್ರದುರ್ಗ : ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸೋಮವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ 11 ತಿಂಗಳ ಹಣ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ. ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ ಎಂದರು.
ಕೋವಿಡ್ ಕಾಲದ ಭ್ರಷ್ಟಾಚಾರ ಬಯಲು :
ಕೋವಿಡ್ ವೇಳೆ ಬಿಜೆಪಿ ಸಚಿವರು ಮಾಡಿದ್ದ ಭ್ರಷ್ಟಾಚಾರ ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ಮಾಸ್ಕ್, ಆಕ್ಸಿಜನ್, ಬೆಡ್ ಖರೀದಿ ಇನ್ನಿತರ ಪರಿಕರಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಇದೀಗ ಕೋವಿಡ್ ಕಾಲದ ಭ್ರಷ್ಟಾಚಾರ ಕುರಿತು ರಚಿಸಲಾಗಿದ್ದ ತನಿಖಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಈ ಕುರಿತು ಶೀಘ್ರವೇ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.