ಮುಡಾ ತೀರ್ಪು | ದ್ವೇಷದ ರಾಜಕಾರಣದ ಭಾಗವಾಗಿ ನಡೆಯುತ್ತಿರುವ ಬೆಳವಣಿಗೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ : ಸಚಿವ ಮಹದೇವಪ್ಪ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಈ ಮಂಗಳವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿವ ಎಚ್.ಸಿ.ಮಹದೇವಪ್ಪ, "ಮುಂದಿನ ಹಂತದ ನ್ಯಾಯಾಂಗ ಹೋರಾಟಕ್ಕೆ ನಮ್ಮ ಸರಕಾರ ಹಾಗೂ ಕಾಂಗ್ರೆಸ್ ಪಕ್ಷ ಸಿದ್ಧವಾಗಿದ್ದು, ಇಡೀ ರಾಜ್ಯದ ಜನರು ಮತ್ತು ಹೈಕಮಾಂಡ್ ಮುಖ್ಯಮಂತ್ರಿಗಳ ಬೆನ್ನಿಗಿದ್ದಾರೆ. ದ್ವೇಷದ ರಾಜಕಾರಣದ ಭಾಗವಾಗಿ ನಡೆಯುತ್ತಿರುವ ಬೆಳವಣಿಗೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಪ್ರಶ್ನೆಯೂ ಇಲ್ಲ" ಎಂದು ತಿಳಿಸಿದ್ದಾರೆ.
"ಜನಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಷಯದಲ್ಲಿ ಅನೈತಿಕ ಮಾರ್ಗ ಅನುಸರಿಸಿದ ರಾಜ್ಯಪಾಲರು ಮತ್ತು ಬಿಜೆಪಿಗರು, ನೈತಿಕತೆ ಹೆಸರಲ್ಲಿ ರಾಜೀನಾಮೆ ಕೊಡಿ ಎಂದು ಕೇಳುತ್ತಿರುವುದು ದೊಡ್ಡ ದುರಂತವೇ ಸರಿ" ಎಂದು ಹೇಳಿದ್ದಾರೆ.
‘ರಾಜಭವನವನ್ನು ದುರುಪಯೋಗ ಪಡಿಸಿಕೊಂಡು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಸಂಚಿನ ರಾಜಕೀಯದಲ್ಲಿ ಅಂತಿಮ ಜಯ ನಮ್ಮದಾಗಲಿದೆ. ಮುಡಾ ಪ್ರಕರಣವನ್ನು ಸೃಷ್ಟಿಸಿ ಸರಕಾರವನ್ನು ಅಸ್ಥಿರಗೊಳಿಸುವ ಮೂಲಕ ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಬಡ ಜನರಿಂದ ಕಸಿಯುವ ಬಿಜೆಪಿ, ಜೆಡಿಎಸ್ ಪ್ರಯತ್ನ ವಿಫಲವಾಗಿದೆ. ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ’
-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ