ಕಾಡುಗೊಲ್ಲ ಅಭಿವೃದ್ಧಿ ನಿಗಮ | 50 ಕೋಟಿ ರೂ.ಕ್ರಿಯಾ ಯೋಜನೆಗೆ ಅನುಮೋದನೆ : ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು : ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ 50 ಕೋಟಿ ರೂ.ಗಳ ಅನುದಾನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಜೂ.28ರಂದು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉತ್ತರಿಸಿದ್ದಾರೆ.
ಶುಕ್ರವಾರ ವಿಧಾನ ಪರಿಷತ್‍ನಲ್ಲಿ ಕಾಂಗೆಸ್‍ನ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಡುಗೊಲ್ಲ ಅಭಿವೃದ್ದಿ ನಿಗಮಕ್ಕೆ 2022-23ನೆ ಸಾಲಿನಲ್ಲಿ ಸರಕಾರವು ನಿಗಮಕ್ಕೆ 20 ಕೋಟಿ ರೂ.ಗಳನ್ನು ಮೀಸಲಿಟ್ಟು, 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
2023-24ನೆ ಸಾಲಿನಲ್ಲಿ ನಿಗಮಕ್ಕೆ 15 ಕೋಟಿ ರೂ.ಗಳನ್ನು ಮೀಸಲಿಟ್ಟು, 15 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. 2024-25ನೆ ಸಾಲಿನಲ್ಲಿ 15 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈಗಾಗಲೇ 2022-23ನೆ ಮತ್ತು 2023-24ನೆ ಸಾಲಿನಲ್ಲಿ ಬಿಡುಗಡೆಯಾದ 35 ಕೋಟಿ ರೂ. ಹಾಗೂ ಪ್ರಸಕ್ತ ಸಾಲಿನ 15 ಕೋಟಿ ರೂ. ಸೇರಿ 50 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಸಮುದಾಯಕ್ಕೆ ಮೀಸಲಿಟ್ಟ ಹಣ ಇನ್ನು ಬಿಡುಗಡೆಯಾಗದಿರಲು ಕೆಲವು ತಾಂತ್ರಿಕ ಕಾರಣಗಳು ತೊಡಕ್ಕಾಗಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಅನುಕೂಲವಾಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಈ ಸಮುದಾಯದ ಬಗ್ಗೆ ಕಳಕಳಿ ಇರುವ ವ್ಯಕ್ತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆಯೂ ಇದೆ. ಶೀಘ್ರದಲ್ಲೇ ಇದರ ಬಗ್ಗೆ ಕ್ರಮಕೈಗೊಳ್ಳಲಾಗುವುದು.
ಈ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂಬ ಸದಸ್ಯ ನಾಗರಾಜ್ ಅವರ ಮನವಿಗೆ ಉತ್ತರಿಸಿದ ಅವರು, ಈಗಾಗಲೇ ರಾಜ್ಯ ಸರಕಾರವು ಕೇಂದ್ರಕ್ಕೆ ಶಿಫಾರಸ್ಸನ್ನು ಮಾಡಿದೆ. ಮುಖ್ಯಮಂತ್ರಿಗಳೂ ಸಂಬಂಧಪಟ್ಟವರ ಜೊತೆ ಚರ್ಚಿಸಿದ್ದಾರೆ. ಕೇಂದ್ರವು ಸ್ಪಂದಿಸುತ್ತದೆ ಎಂಬ ವಿಶ್ವಾಸವನ್ನು ತಂಗಡಗಿ ವ್ಯಕ್ತಪಡಿಸಿದರು.