ಮುಡಾ ಪ್ರಕರಣ | ಆ.3ರಿಂದ ಬೆಂಗಳೂರಿನಿಂದ - ಮೈಸೂರಿಗೆ ಪಾದಯಾತ್ರೆ : ಬಿ.ವೈ.ವಿಜಯೇಂದ್ರ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿರುವುದನ್ನು ಖಂಡಿಸಿ ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ರವಿವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರ ಸಭೆಯ ಬಳಿಕ ಜಂಟಿಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗುತ್ತದೆ. ಆ.3ರಂದು ಪಾದಯಾತ್ರೆಗೆ ಚಾಲನೆ ನೀಡಲಾಗುವುದು, ಆ.10ರಂದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಯನ್ನು ಉದ್ಘಾಟಿಸಿ, ಅವರು ಭಾಗವಹಿಸುತ್ತಾರೆ. ಸಮಾರೋಪ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸಲಿದ್ದಾರೆ ಎಂದು ವಿಜಯೇಂದ್ರ ಮಾಹಿತಿ ನೀಡಿದರು.
ಇಂದಿನ ಸಭೆಯಲ್ಲಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ರಾಜ್ಯದ ಸರಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ಚರ್ಚಿಸಲಾಗಿದೆ ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಭ್ರಷ್ಟ ಸರಕಾರ ಕಿತ್ತೊಗೆಯುವ ಹೋರಾಟದಲ್ಲಿ ಜನರೂ ಭಾಗವಹಿಸಬೇಕು. ಎರಡೂ ಪಕ್ಷಗಳು ಸೇರಿ ಹೋರಾಟ ನಡೆಸಲಿದ್ದು, ಹತ್ತಾರು ಸಾವಿರ ಜನ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲೂ ಇದರ ಕುರಿತು ಚರ್ಚೆ ಆಗಿದೆ. ಮುಖ್ಯಮಂತ್ರಿಗೆ ಕಿಂಚಿತ್ತು ಗೌರವ ಇದ್ದರೆ, ಮಾಡಿರುವ ಅಪರಾಧವನ್ನು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು.