ಮೈಸೂರು: ಮುಖ್ಯಮಂತ್ರಿ ಆಗಮನದ ವೇಳೆ ಪ್ರತಿಭಟನೆಗೆ ಮುಂದಾದ ಹಲವು ರೈತ ಮುಖಂಡರು ಪೊಲೀಸ್ ವಶಕ್ಕೆ
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮೈಸೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಮುಂಜಾಗ್ರತೆಯಿಂದ ಶುಕ್ರವಾರ ಬೆಳಗ್ಗೆ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರು ಜಿಲ್ಲೆಯಲ್ಲಿರುವ ಬಣ್ಣಾರಿ ಶುಗರ್ಸ್ ಕಾರ್ಖಾನೆ ಕಬ್ಬಿಗೆ ಹೆಚ್ಚಿನ ದರ ನೀಡುತ್ತಿಲ್ಲ ಎಂದು ನ.9 ರಂದು ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನೆಗೆ ಅವಕಾಶ ಕೊಡದೆ ಬಂಧಿಸಿದ್ದರು.
ಇದರಿಂದ ಆಕ್ರೋಶಗೊಂಡಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನಿನ್ನೆ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದರು.
ಇಂದು ಮೈಸೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಎರಡು ದಿನಗಳ ಪ್ರವಾಸ ಇರುವುದರಿಂದ ರೈತರು ಪ್ರತಿಭಟನೆ ಮಾಡಲಿದ್ದಾರೆ ಎಂಬ ಮುನ್ಸೂಚನೆಯಿಂದ ಪೊಲೀಸರು ಶುಕ್ರವಾರ ಬೆಳಗ್ಗೆ ಮೈಸೂರು ಜಿಲ್ಲೆಯ, ಜಯಪುರ, ಬನ್ನೂರು, ಟಿ.ನರಸೀಪುರದಲ್ಲಿರುವ ರೈತ ಮುಖಂಡರುಗಳನ್ನು ವಶಕ್ಕೆ ಪಡೆದಿದ್ದಾರೆ.
ವಿಷಯ ತಿಳಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮೈಸೂರಿನ ನ್ಯಾಯಾಲಯದ ಬಳಿ ಇರುವ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆಗೆ ಕರೆ ನೀಡಿದ್ದರು. ಕುರುಬೂರು ಶಾಂತಕುಮಾರ್ ಮನೆಯಿಂದ ಹೊರಬರುತ್ತಿದ್ದಂತೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮುನ್ನ ಮಾಧ್ಯಮ ಹೇಳಿಕೆ ನೀಡಿರುವ ಕುರುಬೂರು ಶಾಂತಕುಮಾರ್ ಪೊಲೀಸರ ನಡೆಯನ್ನು ಖಂಡಿಸಿದ್ದಾರೆ.
ನಾವು ಈ ಹಿಂದೆ ಸಮಾಜ ಘಾತುಕ ವ್ಯಕ್ತಿಗಳನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯುತ್ತಿದ್ದನ್ನು ನೋಡಿದ್ದೆವು. ಆದರೆ ಇಂದು ಪೊಲೀಸರು ರೈತರನ್ನು ವಶಕ್ಕೆ ಪಡೆದು ನಮ್ಮ ತಾಳ್ಮೆಯನ್ನು ಕೆಣಕಿದ್ದಾರೆ. ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ರೈತರ ಮನೆಗಳಿಗೆ ಹೋಗಿ ಬಂಧಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗುಲಾಮರಾಗಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಂಧನ ಮಾಡಿರುವ ರೈತರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ರಾಜ್ಯದ ಮೂಲೆ ಮೂಲೆಗಳಲ್ಲಿ ರೈತರು ರಸ್ತೆ ತಡೆ ನಡೆಸಲು ಸೂಚನೆ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.