ಮಂಡ್ಯ: ಗಣೇಶ ವಿಗ್ರಹ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ; ಲಾಠಿ ಚಾರ್ಜ್
ಅಂಗಡಿ, ಟೈರುಗಳಿಗೆ ಬೆಂಕಿ ಹಚ್ಚಿ ಆಕ್ರೋಶ
ಮಂಡ್ಯ : ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂಬಂಧ ಬುಧವಾರ ರಾತ್ರಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದ್ದು, ಪರಿಣಾಮ ಪೊಲೀಸ್ ಸೇರಿ ಹಲವರಿಗೆ ಗಾಯಗಳಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರಕರಣದ ಹಿನ್ನೆಲೆ:
ಪಟ್ಟಣ ವ್ಯಾಪ್ತಿಯ ಬದರಿಕೊಪ್ಪಲು ಗ್ರಾಮದ ಯುವಕರು ಪಟ್ಟಣದ ಹೆದ್ದಾರಿಯಲ್ಲಿ ಗಣೇಶ ವಿಸರ್ಜನೆ ಅಂಗವಾಗಿ ಮೆರವಣಿಗೆ ಮಂಡ್ಯ ವೃತ್ತದ ದರ್ಗಾದ ಬಳಿ ಆಗಮಿಸಿದಾಗ ಕಲ್ಲುತೂರಾಟವಾಗಿ ಎರಡು ಗುಂಪಿನ ನಡುವೆ ಘರ್ಷಣೆ ಉಂಟಾಯಿತು ಎನ್ನಲಾಗಿದೆ.
ಈ ಸಂದರ್ಭದಲ್ಲಿ ಪರಸ್ಪರ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಕೆಲವು ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚಿ, ಟೈರ್‌ಗೆ ಬೆಂಕಿಹಾಕಿದ್ದಾರೆ. ಕೂಡಲೇ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
ಮೆರವಣಿಗೆಯನ್ನು ವೃತ್ತದಲ್ಲೇ ಇರುವ ಪೊಲೀಸ್ ಠಾಣೆ ಎದುರು ನಿಲ್ಲಿಸಿದ ಯುವಕರು ತಮಗೆ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಧರಣಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕಳೆದ ವರ್ಷವೂ ಇದೇ ಪರಿಸ್ಥಿತಿ ಉಂಟಾಗಿತ್ತು. ಆದರೂ, ಈ ವರ್ಷ ಪೊಲೀಸರು ಮುನ್ನೆಚ್ಚರಿಕೆವಹಿಸದ ಕಾರಣ ಕಳೆದ ವರ್ಷದ ಪರಿಸ್ಥಿತಿ ಮತ್ತೆ ಮರುಕಳಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.