ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಹಾಸಿಗೆ ಕಾಯ್ದಿರಿಸಲು ಸೂಚನೆ
ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿನ ಚಿಕಿತ್ಸೆಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಹಾಗೆಯೇ ಕೋವಿಡ್-19 ಸೋಂಕು ಮುನ್ನೆಚ್ಚರಿಕೆ ವ್ಯವಸ್ಥೆ ವಹಿಸುವ ಸಲುವಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯ ಎಚ್-ಬ್ಲಾಕ್, ಕೆ.ಸಿ. ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ ಹಾಗೂ ರಾಜೀವ್ ಗಾಂದಿ ಎದೆರೋಗಗಳ ಸಂಸ್ಥೆಗಳಲ್ಲಿ ಐಸೋಲೆಟೇಡ್ ಕೋವಿಡ್ ವಾರ್ಡನ್ನು ಕಾಯ್ದಿರಿಸಬೇಕು ಎಂದು ತಿಳಿಸಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದುದರಿಂದ ಸೋಂಕಿನ ಲಕ್ಷಣಗಳುಳ್ಳ ರೋಗಿಗಳು ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬಂದಾಗ ರೋಗಿಗಳಿಗೆ ಚಿಕಿತ್ಸೆ ನೀಡಿ, ದಾಖಲಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
Next Story