ರಾಹುಲ್ ಗಾಂಧಿ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಅರ್ಜಿದಾರರಿಗೆ 25 ಸಾವಿರ ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್
PC: PTI
ಬೆಂಗಳೂರು: ಮಾಜಿ ಸಂಸದ ಎಚ್.ಡಿ.ರೇವಣ್ಣರನ್ನು ಟೀಕಿಸುವ ಭರದಲ್ಲಿ ಸಂಸದ ರಾಹುಲ್ ಗಾಂಧಿ ಮಹಿಳೆಯರ ಘನತೆಗೆ ಚ್ಯುತಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಅರ್ಜಿದಾರರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭ ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಮತ ಗಳಿಕೆಯ ಉದ್ದೇಶದಿಂದ ರಾಹುಲ್ ಈ ಸುಳ್ಳು ಆರೋಪ ಮಾಡಿದ್ದು, ಇದರಿಂದ ಹಾಸನದ ಮಹಿಳೆಯರ ಗೌರವಕ್ಕೆ ಧಕ್ಕೆಯಾಗಿದೆ. ಹಾಗಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿಯು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿ, ಅರ್ಜಿದಾರರಿಗೆ ದಂಡ ವಿಧಿಸಿ ಆದೇಶಿಸಿದೆ.