ಸಿಎಂ ಭೇಟಿಗೆ ಅವಕಾಶ ನೀಡದ ಪ್ರಧಾನಿ ಮೋದಿ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
ಬೆಂಗಳೂರು: ಕೇಂದ್ರ ಸರ್ಕಾರದ ಬರ ಮಾರ್ಗಸೂಚಿಯ ವಿರುದ್ಧ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, “ಕೇಂದ್ರ ಮಾರ್ಗಸೂಚಿಗಳು ಬರ ಘೋಷಣೆಗೆ ಅನುಕೂಲಕರವಾಗಿಲ್ಲ. ಹೀಗಾಗಿ ಹಳೆಯ ಮಾರ್ಗಸೂಚಿಯನ್ನು ಅನುಸರಿಸುವಂತೆ ಕೇಂದ್ರ ಮನವಿ ಮಾಡಲಾಗಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆʼʼ ಎಂದು ತಿಳಿಸಿದರು.
ʼʼಪತ್ರಕ್ಕೆ ಈವರೆಗೆ ಉತ್ತರ ಬಂದಿಲ್ಲ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಯಾವಕಾಶ ಕೋರಿದ್ದಾರೆ. ಆದರೆ, ಪ್ರಧಾನಿ ಭೇಟಿಗೂ ಅವಕಾಶ ನೀಡಿಲ್ಲ. ಪರಿಣಾಮ ಬರ ಘೋಷಣೆ ಕಗ್ಗಂಟಾಗಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ” ಎಂದು ಅವರು ಅಸಮಾಧಾನ ಹೊರಹಾಕಿದರು.
ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಹಕಾರ ಸಚಿವರಾದ ಎನ್ ರಾಜಣ್ಣ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಮುಖ್ಯ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸೇರಿದಂತೆ ಸಂಬಂಧಿತ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.