ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್‌ಐಟಿ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ‘ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ’ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶೇಷ ತನಿಖಾ ತಂಡ(ಎಸ್‌ಐಟಿ) ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಪ್ರಕರಣದ ಪ್ರಮುಖ ಆರೋಪಿಯ ಬಂಧನಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ಗೊತ್ತಾಗಿದೆ.
ಶನಿವಾರ ನಗರದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣದಲ್ಲಿ ಈ ವರೆಗಿನ ಬೆಳವಣಿಗೆಗಳ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಈಗಾಗಲೇ ಲುಕ್‍ಔಟ್ ನೋಟಿಸ್ ಹೊರಡಿಸಿದ್ದು, ಜೊತೆಗೆ ಆರೋಪಿಯ ಬಂಧನಕ್ಕೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಲೈಂಗಿಕ ಹಗರಣದ ಆರೋಪಿಯೆನ್ನಲಾದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ಧಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಬ್ಲೂ ಕಾರ್ನರ್’ ನೋಟಿಸ್ ಹೊರಡಿಸುವ ಸಾಧ್ಯತೆ
ಪ್ರಕರಣದ ಆರೋಪಿಯನ್ನು ಸೂಕ್ತ ಕ್ರಮಗಳೊಂದಿಗೆ ತ್ವರಿತ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ‘ಬ್ಲೂ ಕಾರ್ನರ್’ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು, ತನಿಖೆಗೆ ಇನ್ನಷ್ಟು ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಆರೋಪಿಯನ್ನು ಬಂಧಿಸಿ ಕರೆ ಕರ್ನಾಟಕಕ್ಕೆ ತರಲಾಗುವುದು ಎಂದು ಸಿಎಂಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದರು.