ಸಂಸದ ಸ್ಥಾನ ಅಸಿಂಧು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಪ್ರಜ್ವಲ್ ರೇವಣ್ಣ ಅರ್ಜಿ
ಬೆಂಗಳೂರು, ಸೆ.14: ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್‍ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ಮುಂದಿನ ಶುಕ್ರವಾರ ಅಥವಾ ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿರುವ ಅಂದಿನ ಬಿಜೆಪಿಯ ಎ.ಮಂಜು ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಕುರಿತಾಗಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಚುನಾವಣಾ ಅಕ್ರಮದ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆ.1ರಂದು ಹೈಕೋರ್ಟ್ ತೀರ್ಪು ನೀಡಿತ್ತು.
ಈ ತೀರ್ಪು ಪ್ರಶ್ನಿಸಿ, ಪ್ರಜ್ವಲ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವೇಣುಗೋಪಾಲ ಅವರು ಪ್ರಜ್ವಲ್ ಪರ ವಾದ ಮಂಡನೆ ಮಾಡಲಿದ್ದಾರೆ.