ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಮಾಡಿಸಿದ್ದರೆ ಮಹಾಪಾಪ : ಹೈಕೋರ್ಟ್
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಮಾಡಿಸಿದ್ದರೆ ಅದು ಮಹಾ ಪಾಪ. ಈ ಮೂಲಕ ಸಂತ್ರಸ್ತೆಯರಿಗೆ ಅವಮಾನ ಮಾಡಲಾಗಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪೆನ್‌ಡ್ರೈವ್ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ನಂತರದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು, ಈ ಅರ್ಜಿಯು ನ್ಯಾಯಾಲಯದ ಮುಂದೆ ಬರದೇ ನಾಪತ್ತೆಯಾಗಿತ್ತು. ಅದಕ್ಕಾಗಿ ಈ ಅರ್ಜಿಯನ್ನು ಪಟ್ಟಿ ಮಾಡುವಂತೆ ಸೂಚಿಸಿದ್ದೆ ಎಂದು ಹೇಳಿತು.
ಆಗ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು “ಪ್ರೀತಮ್ ಗೌಡ ಅವರನ್ನು ನಾನು ಪ್ರತಿನಿಧಿಸುತ್ತಿದ್ದೇನೆ. ವಾದ ಮಂಡಿಸಲು ನಾನು ಸಿದ್ಧನಿದ್ದೇನೆ. ವಿಶೇಷ ತನಿಖಾ ತಂಡವು ತನಿಖೆ ಮುಂದುವರಿಸಬಹುದು. ಅದಕ್ಕೆ ನಮ್ಮ ಆಕ್ಷೇಪವಿಲ್ಲ” ಎಂದು ಹೇಳಿದರು.
ಆಗ ಪೀಠವು ನೀವು ವಿಚಾರಣೆಗೆ ಸಹಕರಿಸುತ್ತಿಲ್ಲವೇ ಎಂದು ನಾಗೇಶ್ ಅವರನ್ನು ಪ್ರಶ್ನಿಸಿತು. ಇದಕ್ಕೆ ನಾಗೇಶ್ ಅವರು ಎಸ್‌ಐಟಿಯು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿಯೇ ಇಲ್ಲ ಎಂದರು. ಆಗ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಪೀಠವು ಯಾಕೆ ನೋಟಿಸ್ ನೀಡಿಲ್ಲ? ಮೊದಲಿಗೆ ಪ್ರಕರಣವನ್ನು ಉತ್ಪ್ರೇಕ್ಷೆ ಮಾಡುತ್ತೀರಿ. ಬಳಿಕ ಪ್ರಕರಣದ ಮೇಲೆ ಯಾವುದೇ ಆಸಕ್ತಿ ಇಲ್ಲವೇ ಇಲ್ಲ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಆಗ ಮಧ್ಯಪ್ರವೇಶಿಸಿದ ಪ್ರೀತಂ ಪರ ವಕೀಲ ನಾಗೇಶ್ ಅವರು ಪೆನ್‌ಡ್ರೈವ್ ಹಂಚಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು. ಆಗ ನ್ಯಾಯಮೂರ್ತಿಗಳು ಅದು ಸತ್ಯವಿರಬಹುದು. ಒಂದು ವೇಳೆ ಪ್ರೀತಮ್ ಗೌಡ ವಿಡಿಯೋಗಳನ್ನು ಹಂಚಿಕೆ ಮಾಡಿದ್ದರೆ ಅದು ನೀವು ಎಸಗಿರುವ ದೊಡ್ಡ ಪಾಪ. ಆ ಮೂಲಕ ಸಂತ್ರಸ್ತೆಯರಿಗೆ ಅವಮಾನ ಮಾಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು ಈ ವಾದವನ್ನು ಕೇಳಿಯೇ ಮಧ್ಯಂತರ ಆದೇಶವನ್ನು ನ್ಯಾಯಾಲಯ ತಿರಸ್ಕರಿಸಿತ್ತು ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು.
ವಾದ ಆಲಿಸಿದ ಪೀಠವು ವಿಚಾರಣೆಯನ್ನು ಮುಂದೂಡಿದೆ.