ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಪ್ರವೀಣ್ ನೆಟ್ಟಾರು
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿಯ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್ ಶಫಿ, ಕೆ.ಮೊಹಮ್ಮದ್ ಇಕ್ಬಾಲ್ ಹಾಗೂ ಎಂ.ಶಾಹೀದ್ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.
ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಪಾತ್ರ ವಹಿಸುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಭೌತಿಕವಾಗಿ ಹಾಜರಿರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಪಿತೂರಿ ಸಭೆಯಲ್ಲಿ ಭಾಗವಹಿಸಿದ್ದರು. ಇವರು ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು ಎಂಬ ಅಂಶ ತನಿಖೆಯಲ್ಲಿ ತಿಳಿದು ಬಂದಿದೆ. ಅಪರಾಧ ಕೃತ್ಯಕ್ಕೆ ಪಿತೂರಿ ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಜಾಮೀನು ಅರ್ಜಿಯನ್ನು ನಿರಾಕರಿಸಿದೆ.