‘ಗೃಹಲಕ್ಷ್ಮಿ'ಗೆ ಸಿದ್ಧತೆ; ಜಿಲ್ಲಾಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಡಿಯೋ ಸಂವಾದ
ಬೆಂಗಳೂರು, ಜು.15: ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಶನಿವಾರ ವಿಕಾಸಸೌಧದಲ್ಲಿ ಜು.19ರಂದು ಚಾಲನೆ ನೀಡಲಿರುವ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನೋಂದಣಿ ಸ್ಥಳದಲ್ಲಿ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು ಹಾಗೂ ಯಾವುದೇ ಗೊಂದಲಗಳಿಗೆ ಅನುವು ಮಾಡಿಕೊಡಬಾರದು. ಸುಗಮ ನೋಂದಣಿಗೆ ಅನುಕೂಲವಾಗುವಂತೆ ಅಗತ್ಯವಿರುವ ಕಂಪ್ಯೂಟರ್, ಇಂಟರ್‍ನೆಟ್ ಸಂಪರ್ಕ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ಅವರು ಆದೇಶಿಸಿದರು.
ನೋಂದಣಿಗೆ ಆಗಮಿಸುವ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಬೇಕು. ಮಳೆಗಾಲ ಇರುವುದರಿಂದ ಸರದಿಯಲ್ಲಿ ನಿಲ್ಲಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು. ನೋಂದಣಿ ಕೇಂದ್ರಗಳಲ್ಲಿ ಸ್ಥಳೀಯ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸಬೇಕು. ಇದರಿಂದ ನೋಂದಣಿ ಪ್ರಕ್ರಿಯೆ ಮೇಲ್ವಿಚಾರಣೆ ಸುಗಮವಾಗಲಿದೆ. ಪ್ರತಿ ನೋಂದಣಿ ಕೇಂದ್ರಗಳಲ್ಲಿ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದರು.