ಸಾವಿರ ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್ | ಒಂದು ಲಕ್ಷ ಜನರಿಗೆ ನೇರ ಉದ್ಯೋಗ : ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‍ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳವಾರ ವಿಕಾಸೌಧದ ಕಚೇರಿಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪಾರ್ಕ್ ಅವಶ್ಯಕತೆಗಳಿಗೆ ಅನುಗುಣವಾಗಿ 16ಎಂಎಲ್‍ಡಿ ನೀರಿನ ಅವಶ್ಯಕತೆಯಿದೆ. ಮದ್ರಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್‍ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಪಾರ್ಕ್ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು ಮತ್ತು ಮಳೆನೀರು ಕೊಯ್ಲು ಪದ್ಧತಿ ಅಳವಡಿಕೆ ಮೂಲಕ ನೀರನ್ನು ಬಳಸಿಕೊಳ್ಳುವ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಜವಳಿ ಪಾರ್ಕ್ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ, ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಬೇಕು. ಜವಳಿ ಪಾರ್ಕ್ ಆವರಣದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಮಿತವ್ಯಯ ಮಾಡಿ, ಉಳಿದಂತೆ ಜವಳಿ ಪಾರ್ಕ್‍ಗೆ 180 ಮೆಗಾ ವ್ಯಾಟ್ ವಿದ್ಯುತ್ ಸಂಪರ್ಕ ಪೂರೈಸುವ 220 ಕೆ.ವಿ ಪವರ್ ಸಬ್‍ಸ್ಟೇಷನ್ ನಿರ್ಮಿಸಲು ವಿದ್ಯುತ್ ಪ್ರಸರಣ ನಿಗಮದ ಮನವಿಯಂತೆ ಪಾರ್ಕ್ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ (ಜವಳಿ) ವಿಪುಲ್ ಬನ್ಸಾಲ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.