ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧು ಕೋರಿ ಅರ್ಜಿ: ಹೈಕೋರ್ಟ್ ನಿಂದ ಸಮನ್ಸ್ ಜಾರಿ
ಬೆಂಗಳೂರು, ಆ.3: ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆರೋಪದಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪ್ರಿಯಾಂಕ್ ಖರ್ಗೆಯವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕು ನಿವಾಸಿ ಅಶ್ವಥರಾಮ ರಾಠೋಡ್ ಎಂಬವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಸಮನ್ಸ್ ಜಾರಿ ಮಾಡಿ, ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.
ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪೂರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಿಯಾಂಕ್ ಖರ್ಗೆ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಎಸ್ಸಿ ಜಾತಿ ಪ್ರಮಾಣಪತ್ರದ ಬದಲು ಗ್ರಾಮ ಪಂಚಾಯತ್ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ ಸಹ 2021 ಪ್ರಮಾಣ ಪತ್ರವಾಗಿದೆ.
ಅದೇ ಅವರ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿಫದಂತೆಯೂ ಅಸಮರ್ಪಕ ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ತನ್ನ ಅರ್ಜಿಯಲ್ಲಿ ಕೋರಿದ್ದಾರೆ.