ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್‌ನಲ್ಲಿ ನಾಳೆ (ನ.22) ಡಿಕೆಶಿ ಮೇಲ್ಮನವಿ ವಿಚಾರಣೆ
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ(ಸಿಬಿಐ) ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಆದೇಶ ರದ್ದು ಕೋರಿರುವ ಮೇಲ್ಮನವಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಮಂಗಳವಾರ ನಡೆಯಲಿದೆ.
ಕಳೆದ ವಿಚಾರಣೆ ವೇಳೆ ಸಿಬಿಐ ಪರವಾಗಿ ವಾದಿಸಿದ್ದ ವಿಶೇಷ ಸರಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್ ಅವರು, ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠಕ್ಕೆ ಸುಪ್ರೀಂಕೋರ್ಟ್ ಆದೇಶವನ್ನು ಸಲ್ಲಿಸಿ, ಪ್ರಕರಣ ಪಟ್ಟಿ ಮಾಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ನ.22ಕ್ಕೆ ಪಟ್ಟಿ ಮಾಡುವಂತೆ ಹೈಕೋರ್ಟ್ ವಿಭಾಗೀಯ ಪೀಠವು ರಿಜಿಸ್ಟ್ರಾರ್ ಗೆ ಆದೇಶಿಸಿತ್ತು.
ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್ಗಳ ಅಡಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಲು ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರಕಾರ ಸಿಬಿಐಗೆ ಒಪ್ಪಿಸಿ ಆದೇಶಿಸಿತ್ತು.
ಈ ಆದೇಶ ವಜಾ ಮಾಡಲು ನಿರಾಕರಿಸಿದ್ದ ಕರ್ನಾಟಕ ಏಕಸದಸ್ಯ ಪೀಠದ ಆದೇಶಕ್ಕೆ ಮುಂದಿನ ವಿಚಾರಣೆಯವರೆಗೆ ತಡೆ ನೀಡಲಾಗಿದೆ ಎಂದು 2023ರ ಜೂ.12ರಂದು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿತ್ತು.
ಪ್ರಕರಣವೇನು?: ಡಿ.ಕೆ.ಶಿವಕುಮಾರ್ ಅವರು ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ 2017ರ ಆ.2ರಂದು ಆದಾಯ ತೆರಿಗೆ ಇಲಾಖೆ(ಐಟಿ) ದಾಳಿ ನಡೆಸಿತ್ತು. ಈ ವೇಳೆ 8.59 ಕೋಟಿ ರೂ.ಹಣ ಪತ್ತೆಯಾಗಿತ್ತು. ಡಿಕೆಶಿ ಅವರಿಗೆ ಸೇರಿದ ವಸತಿ ಕಟ್ಟಡವೊಂದರಲ್ಲಿ 41 ಲಕ್ಷ ರೂ.ಪತ್ತೆಯಾಗಿತ್ತು.
ಇದರ ಬೆನ್ನಿಗೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಜಾರಿ ನಿರ್ದೇಶನಾಲಯವು ಶಿವಕುಮಾರ್ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು. ಇದನ್ನು ಆಧರಿಸಿ 2019ರ ಸೆ.3ರಂದು ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಆನಂತರ 2019ರ ಸೆ.9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ಪ್ರಕರಣವನ್ನು ಒಪ್ಪಿಸಿ ರಾಜ್ಯ ಸರಕಾರವು ಆದೇಶಿಸಿತ್ತು.