ಸಿಎಂ ವಿರುದ್ಧ ಪ್ರಾಸಿಕ್ಯೂಷನ್ | ‘ರಾಜ್ಯಪಾಲರ ಷಡ್ಯಂತ್ರರ ನಡೆ ಖಂಡಿಸಿ’ ಸೋಮವಾರ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ‘ಮುಡಾ’ ನಿವೇಶನ ಹಂಚಿಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ರಾಜಕೀಯ ಷಡ್ಯಂತ್ರದ ನಡೆಯನ್ನು ಖಂಡಿಸಿ ಸೋಮವಾರ(ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾಳೆ ಕೆಪಿಸಿಸಿ ಜಿಲ್ಲಾ ಘಟಗಳಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕು. ರಾಜ್ಯಪಾಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದು, ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಬೇಕು ಎಂದು ಸಲಹೆ ನೀಡಿದರು.
‘ರಾಜ್ಯಪಾಲರ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಇ-ಮೇಲ್ ಮೂಲಕ ಪತ್ರವನ್ನು ರವಾನಿಸಬೇಕು. ಈ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಕನಿಷ್ಠ ಅರ್ಧ ಕಿ.ಮೀ. ಪಾದಯಾತ್ರೆ ಮೂಲಕ ಹೋಗಿ ಪ್ರತಿಭಟನೆ ಆರಂಭಿಸಬೇಕು. ಈ ಪ್ರತಿಭಟನೆಯ ವರದಿಯನ್ನು ಕೆಪಿಸಿಸಿಗೆ ಸಲ್ಲಿಸಬೇಕು ಎಂದು ಅವರು ಸೂಚನೆ ನೀಡಿದರು.
ಪ್ರತಿಭಟನೆಯಲ್ಲಿ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಲೋಕಸಭೆ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಕೆಪಿಸಿಸಿ ಸದಸ್ಯರು ಸೇರಿದಂತೆ ಪಕ್ಷದ ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.