ಪಿಎಸ್‌ಐ ಹಗರಣ: ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರ ಆದೇಶ
ಬೆಂಗಳೂರು, ಜು.21: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ವಿಚಾರಣಾ ಆಯೋಗವನ್ನು ರಚಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ರಚನೆ ಮಾಡಿ ತನಿಖೆಗೆ ಆದೇಶಿಸಲಾಗಿದ್ದು, ಪೊಲೀಸ್ ಇಲಾಖೆ ಹಾಗೂ ಸಿಐಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ನಡೆಸಿದ 52 ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಇಲಾಖಾ ಪರೀಕ್ಷೆಗೆ ನಿಷೇಧ ಹೇರಲಾಗಿದೆ. ಈ ಅಕ್ರಮವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ.
545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಾಗಿ 2022ರ ಎ.29ರಂದು ಅಂದಿನ ಬಿಜೆಪಿ ಸರಕಾರ ಆದೇಶಿಸಿತ್ತು. ಈ ಆದೇಶ ರದ್ದುಪಡಿಸಬೇಕು. ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಕೆಎಟಿ 2022ರ ಜು.19ರಂದು ವಜಾಗೊಳಿಸಿತ್ತು. ಇದರಿಂದ, ಅರ್ಜಿದಾರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಮರು ಪರೀಕ್ಷೆ ನಡೆಸುವ ಸರಕಾರದ ನಿರ್ಧಾರಕ್ಕೆ 2022ರ ಸೆ.28ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಇನ್ನು ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸಂಬಂಧ ಬಂಧಿತ ನೇಮಕಾತಿ ವಿಭಾಗದ ಮಾಜಿ ಮುಖ್ಯಸ್ಥ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪಾಲ್ ವಿರುದ್ಧ ಭ್ರಷ್ಟ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಕೇಂದ್ರ ಸರಕಾರ ಈಗಾಗಲೇ ಅನುಮತಿ ನೀಡಿದೆ.