ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಮಂಗಳವಾರ ಮತ್ತು ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ.
ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ 9 ಸೆಂ.ಮೀ, ಹಾಸನ ಜಿಲ್ಲೆಯ ಸಿ.ಆರ್.ಪಟ್ನಾದಲ್ಲಿ 8 ಸೆಂ.ಮೀ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.