ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ
ಬೆಂಗಳೂರು : ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮುಂಗಾರು ಪೂರ್ವದಲ್ಲೇ ಅಲ್ಲಲ್ಲಿ ಸುರಿಯುತ್ತಿರುವ ಮಳೆ ತಂಪೆರೆದಿದೆ. ಈ ಮಧ್ಯೆ ಇನ್ನೂ ನಾಲ್ಕೈದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಂಟೆಗೆ ಸುಮಾರು 40ರಿಂದ 50 ಕಿ.ಮೀ. ವೇಗದಲ್ಲಿ ಬಾರೀ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ.
ಇನ್ನೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಅದೇ ರೀತಿ ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.