ಮಳೆಯ ಅಬ್ಬರ | ರಾಜ್ಯದಲ್ಲಿ ವಿವಿಧ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಮುಂದಿನ 24 ಗಂಟೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ, ಮಲೆನಾಡು ಜಿಲ್ಲೆಯಾದ ಶಿವಮೊಗ್ಗಕ್ಕೆ ಎರಡು ದಿನ ಆರೆಂಜ್, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಆರೆಂಜ್ ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್ ಪ್ರತಿ ಗಂಟೆಗೆ ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಿರಂತರ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗಲಿದೆ.
ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗಲ್ಲಿಯೂ ಹೆಚ್ಚು ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.