ತೆರಿಗೆ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‍ಗೆ ಸಚಿವ ಕೃಷ್ಣ ಬೈರೇಗೌಡ ಸವಾಲು
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾ.31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧರಿದ್ದಾರಾ? ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸವಾಲು ಹಾಕಿದ್ದಾರೆ.
‘ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ’ ಎಂದು ನಿರ್ಮಲಾ ಸೀತಾರಾಮನ್ ನೀಡಿದ ಹೇಳಿಕೆಯ ಹಿನ್ನೆಲೆಯಲ್ಲಿ ಸೋಮವಾರ ವಿಕಾಸಸೌಧದಲ್ಲಿ ತುರ್ತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟರು.
ಯಾವುದೇ ರಾಜ್ಯಕ್ಕೆ 2019-20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. ಹಣಕಾಸು ಆಯೋಗದವರು 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21 ರಲ್ಲಿ 5495 ಕೋಟಿ ರೂ. ಕಡಿಮೆಯಾಗಿತ್ತು. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದದ್ದು ಏಕೆ? ಎಂದು ಕೃಷ್ಣ ಬೈರೇಗೌಡ ಪ್ರಶ್ನಿಸಿದರು.
ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ನಿರ್ಮಲಾ ಸೀತಾರಾಮನ್ ಅವರು, 2021ನೆ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆಯಲ್ಲ ಇದೇನು? ಎಂದು ಅವರು ಪ್ರಶ್ನಿಸಿದರು.
2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ 36,675 ಕೋಟಿ ರೂ. ತೆರಿಗೆ ಪಾಲು ಬಂದಿತ್ತು. 2020-21ಕ್ಕೆ 31,180 ಕೋಟಿ ರೂ.ಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ ನಷ್ಟ 5,495 ಕೋಟಿ ರೂ.ಗಳನ್ನು ಕೇಂದ್ರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈವರೆಗೆ ರಾಜ್ಯಕ್ಕೆ ಹಣ ಬಂದಿಲ್ಲ. 2021-26ನೆ ಸಾಲಿನಲ್ಲಿ 6 ಸಾವಿರ ಕೋಟಿ ರೂ. ಶಿಫಾರಸು ಮಾಡಲಾಗಿದೆ. ಒಟ್ಟಾರೆ, 11,495 ಕೋಟಿ ರೂ. ರಾಜ್ಯಕ್ಕೆ ಬರಬೇಕಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
ಈ ಬಗ್ಗೆ ಪ್ರಶ್ನೆ ಮಾಡಿದರೆ ಸಿದ್ದರಾಮಯ್ಯ ಹೇಳುತ್ತಿರುವುದು ಸುಳ್ಳು ಎನ್ನುತ್ತಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2020ರ ಸೆ.17ರಂದು ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕೋರಿದ್ದರು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಪತ್ರ ಬೆರೆದಿದ್ದರು. ಹಾಗಾದರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸುಳ್ಳು ಹೇಳಿದ್ದಾರಾ? ಎಂದು ಅವರು ಪ್ರಶ್ನಿಸಿದರು.
ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸನ್ನು ನಾವು ತಿದ್ದಲು ಹೋಗುವುದಿಲ್ಲ ಎನ್ನುವ ನಿರ್ಮಲಾ ಸೀತಾರಾಮನ್, ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಉತ್ತರ ನೀಡುತ್ತಾರೆ. ಹಾಗಾದರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ಹೇಳಿದರು.
ನಾವು ಕೇಳುತ್ತಿರುವುದು ಭಿಕ್ಷೆಯಲ್ಲ..!: ಹಣಕಾಸು ಆಯೋಗ ಶಿಫಾರಸು ಮಾಡಿದ ನಮ್ಮ ಅನುದಾನವನ್ನು ನಾವು ಸಂವಿಧಾನಾತ್ಮಕವಾಗಿಯೆ ಕೇಳುತ್ತಿದ್ದೇವೆಯೆ ವಿನಃ ನಾವೇನು ಭಿಕ್ಷೆ ಕೇಳುತ್ತಿಲ್ಲ. ನಮ್ಮ ರಾಜ್ಯದ ಹಕ್ಕನ್ನು ಕೇಳಿದರೆ ಕೇಂದ್ರ ಸರಕಾರ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಆರೋಪ ಹೊರಿಸಿ ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಅವರು ಕಿಡಿಗಾರಿದರು.
ಗ್ಯಾರಂಟಿಗೆ ಕೇಂದ್ರದಿಂದ ನಯಾಪೈಸೆಯೂ ಬೇಕಾಗಿಲ್ಲ: ಗ್ಯಾರಂಟಿಗೆ ಕೇಂದ್ರ ಸರಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸಿಕೊಲ್ಲುತ್ತಿದ್ದೇವೆ. ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ 11,200 ಕೋಟಿ ರೂ.ಗಳನ್ನು ರಾಜ್ಯ ಸರಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರಕಾರದ ಪಾಲು 550 ಕೋಟಿ ರೂ.ಮಾತ್ರ ಎಂದು ಅವರು ಮಾಹಿತಿ ನೀಡಿದರು.
ನಮ್ಮ ತೆರಿಗೆಯಿಂದ ನಮ್ಮ ನ್ಯಾಯಯುತ ಪಾಲನ್ನು ಕೊಟ್ಟರೆ ಸಾಕು. ನಮ್ಮ ರಾಜ್ಯಕ್ಕೆ ಬರಬೇಕಾದ ಬರಪರಿಹಾರವನ್ನು ಕೊಡಲಿ. ಕರ್ನಾಟಕದ ಜನ ಇರುವುದು ಕೇವಲ ಓಟು ಒತ್ತೋಕಷ್ಟೇ ಎಂಬ ಭಾವನೆಯಿಂದ ಕೇಂದ್ರ ಸರಕಾರ ಹೊರಬರಲಿ. ನಮ್ಮನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದನ್ನು ಬಿಡಲಿ. ನಮ್ಮ ಹಕ್ಕನ್ನು ನಮಗೆ ಕೊಡಲಿ ಎಂದು ಕೃಷ್ಣ ಬೈರೇಗೌಡ ಒತ್ತಾಯಿಸಿದರು.